Karnataka Rain Yellow Alert: ಅ.22ರವರೆಗೆ ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ದೀಪಾವಳಿ ಹಬ್ಬದ ವೇಳೆಯೇ ಮಳೆಯ ಆರ್ಭಟ ಜೋರಾಗಿದೆ. ಶನಿವಾರ ಸಂಜೆಯಿಂದಲೂ ಕೆಲವೆಡೆ ಬಿಡುವಿಲ್ಲದೆ ಮಳೆ ಸುರಿದಿದ್ದು, ರಾತ್ರಿಯಿಡೀ ಅಬ್ಬರಿಸಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಕ್ರಿಯವಾಗಿದೆ, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಈ ಹಿನ್ನೆಲೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ. ಭಾನುವಾರವೂ ಭಾರೀ ಮಳೆಯ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ?
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಜೋರಾದ ಗಾಳಿ ಜೊತೆಗೆ ಭಾರೀ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಅಕ್ಟೋಬರ್ 19ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಹಲವೆಡೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.
ಮೀನುಗಾರರಿಗೆ ವಾರ್ನಿಂಗ್
ಅಕ್ಟೋಬರ್ 21ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.
ಚಂಡಮಾರುತದ ಪರಿಚಲನೆ ತೀವ್ರತೆ
ಕೇರಳ-ಕರ್ನಾಟಕ ಕರಾವಳಿಯ ಆಗ್ನೇಯ ಅರಬ್ಬೀ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಈ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀವರೆಗೆ ವಿಸ್ತರಿಸಿದೆ. ಇದು ಪಶ್ಚಿಮ ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ ಎರಡು ದಿನಗಳಲ್ಲಿ ತೀವ್ರಗೊಳ್ಳುತ್ತದೆ.
ಕೇರಳ ಕರ್ನಾಟಕದ ಕರಾವಳಿಯ ಆಗ್ನೇಯ ಅರಬ್ಬೀ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದ ಮೇಲೆ ಉತ್ತಮವಾಗಿ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದ ದಕ್ಷಿಣ ಕೇರಳ, ದಕ್ಷಿಣ ತಮಿಳುನಾಡಿನಾದ್ಯಂತ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಇರಲಿದೆ ಎಂದು ಮಾಹಿತಿ ನೀಡಿದೆ.
ನೈರುತ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಕೊಮೊರಿನ್ ಪ್ರದೇಶದ ಮೇಲೆ ಮೇಲ್ಮಟ್ಟದ ವಾಯುಮಾರ್ಗದ ಪರಿಚಲನೆಯು ಈಗ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಕೊಮೊರಿನ್ ಪ್ರದೇಶದ ಮೇಲೆ ಇದ್ದು ಸರಾಸರಿ ಸಮುದ್ರ ಮಟ್ಟಕ್ಕಿಂತ 1.5 ಕಿ.ಮೀವರೆಗೆ ವಿಸ್ತರಿಸಿದೆ. ಇದರ ಪರಿಣಾಮ ಅಕ್ಟೋಬರ್ 24ರ ಸುಮಾರಿಗೆ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ.












Click it and Unblock the Notifications