Karnataka Rains: ರಾಜ್ಯದಲ್ಲಿ ಭಾರೀ ಮಳೆ, ಪ್ರವಾಹ ಭೀತಿ, 8 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ- ಯಾವ ಜಿಲ್ಲೆಗಳು ತಿಳಿಯಿರ
ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ನದಿಗಳು ಉಕ್ಕಿ ಹಿರಿಯುತ್ತಿವೆ. ಡ್ಯಾಮ್‌ಗಳಿಗೆ ಒಳ ಹರಿವು ಹೆಚ್ಚುತ್ತಿದೆ. ಕರಾವಳಿ ಹಾಗೂ ಕಿತ್ತೂರು ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಳೆ ಮೂರು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 24 ರ ಸೋಮವಾರದಂದು ಎಂಟು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಇದನ್ನು ದೃಢಪಡಿಸಿದ್ದಾರೆ.
ಕೊಡಗು, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ತಾಲೂಕುಗಳಲ್ಲಿ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ಕಳೆದ ಎರಡು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನಲ್ಲಿ ಜುಲೈ 24 ರಂದು ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಳಗಾವಿ ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕನಿಷ್ಠ ಐದು ಸೇತುವೆಗಳು ಮುಳುಗಡೆಯಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಜಿಲ್ಲೆಯಲ್ಲಿ ಯಾವುದೇ ಪ್ರವಾಹ ಪರಿಸ್ಥಿತಿ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸುಳ್ಯ ತಾಲೂಕಿನಲ್ಲಿ ಪರಿಸ್ಥಿತಿ ಆಧರಿಸಿ ಕೆಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜುಲೈ 24 ರಿಂದ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ, ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಶೃಂಗೇರಿ ತಾಲೂಕಿನ ಹೆಗ್ಗಾರು ಗ್ರಾಮದ ಬಳಿ ರಸ್ತೆ ಕುಸಿದು 15 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಉತ್ತರ ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದ್ದು, ಈ ಪ್ರದೇಶದಲ್ಲಿ ಪ್ರವಾಹದಿಂದಾಗಿ ಹಲವು ಸೇತುವೆಗಳು ಜಲಾವೃತವಾಗಿವೆ. ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ 16 ಕಡಿಮೆ ಎತ್ತರದ ಸೇತುವೆಗಳು ಮುಳುಗಿವೆ. ಶುಕ್ರವಾರದಿಂದ ಸಾರ್ವಜನಿಕ ಸಂಚಾರವನ್ನು ನಿರ್ಭಂದಗೊಳಿಸಲಾಗಿದೆ.
ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅನಾಹುತಗಳನ್ನು ತಡೆಗಟ್ಟಲು, ಪೊಲೀಸ್ ಇಲಾಖೆ ಸೇತುವೆಗಳ ಮೇಲೆ ಸಾರ್ವಜನಿಕ ಹಾಗೂ ಪ್ರಾಣಿಗಳ ಸಂಚಾರವನ್ನು ನಿರ್ಬಂಧಿಸಿದೆ. ಸೇತುವೆಗಳ ಎರಡೂ ತುದಿಗಳಲ್ಲಿ 24 ಗಂಟೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದ್ದು, ಹೆಚ್ಚಿನ ಸುರಕ್ಷತೆಗಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.
ಭಾನುವಾರ ಕಲಬುರ್ಗಿಯ ದುಬೈ ನಗರದಲ್ಲಿ ಮಳೆ ನೀರಿನಿಂದ ತುಂಬಿದ್ದ ಹೊಂಡದಲ್ಲಿ 11 ವರ್ಷದ ಅಭಿ ಮತ್ತು 12 ವರ್ಷದ ಅಜಯ್ ಎಂಬ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ವಿವಿಧೆಡೆ ಭಾರೀ ಮಳೆ ಸಾಧ್ಯತೆ
ಉತ್ತರಾಖಂಡ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಗುಜರಾತ್ ರಾಜ್ಯ ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹಿಮಾಚಲ ಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ಆಂತರಿಕ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಕಲಚೇರಿ ಮತ್ತು ಪುದುಕಳಚೇರಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಗುಜರಾತ್ ರಾಜ್ಯಗಳು ಪ್ರವಾಹ ಭೀತಿಯನ್ನು ಎದುರಿಸುತ್ತಿವೆ.












Click it and Unblock the Notifications