ಸಚಿವ ಪ್ರಲ್ಹಾದ ಜೋಶಿ ಸಹೋದರ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು,ಅಕ್ಟೋಬರ್ 29: ಲೋಕಸಭೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಮತ್ತಿತರರ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಅದೇ ರೀತಿ ಎಫ್‌ಐಆರ್ ರದ್ದುಗೊಳಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಬಿಜೆಪಿಯಿಂದ ಟಿಕೆಟ್ ಕೊಡಿಸುವ ಆರೋಪಕ್ಕಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್ ಜೋಶಿ ಮತ್ತು ಎಸ್. ವಿ. ವಿಜಯಲಕ್ಷ್ಮಿ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆಯೂ ಆದೇಶ ಹೊರಡಿಸಿದೆ.

ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರ ಪತ್ನಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಯಲ್ಲಿ ದೂರು ದಾಖಲಿಸಿದ್ದರು. ಇವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ದೇವಾನಂದ್ ಚವ್ಹಾಣ್ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸಹೋದರ ಗೋಪಾಲ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಗೋಪಾಲ ಜೋಶಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಎಫ್‌ಐಆರ್ ರದ್ದುಪಡಿಸಬೇಕು ಮತ್ತು ಇವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದರು.
ವಿಜಯಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ನ ಮಾಜಿ ಶಾಸಕ ದೇವಾನಂದ ಚವ್ಹಾಣ್ ಅವರ ಪತ್ನಿ, ದೂರುದಾರ ಸುನೀತಾ ಚವ್ಹಾಣ್ ಅವರಿಗೆ 2.5 ಕೋಟಿ ರೂಪಾಯಿ ನೀಡಿ ವಂಚಿಸಿದ ಆರೋಪದ ಮೇಲೆ ಅಕ್ಟೋಬರ್ 19ರಂದು ಇಬ್ಬರನ್ನು ಬಂಧಿಸಲಾಗಿತ್ತು. ಆರೋಪಿಗಳು ಕೇಂದ್ರ ಸಚಿವರ ಕಚೇರಿಯನ್ನು ಬಳಸಿಕೊಂಡು ಚುನಾವಣಾ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಆರೋಪಿಸಲಾಗಿದೆ.
ವಿಚಾರಣೆಯ ಸಂದರ್ಭದಲ್ಲಿ ಜೋಶಿ ಮತ್ತಿತರ ಆರೋಪಿಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಡಿ.ಎಂ.ರವಿಶಂಕರ್, ಈ ಪ್ರಕರಣ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಪಟ್ಟಿರುತ್ತದೆ. ಇನ್ನೂ ಘಟನಾವಳಿಗಳು ಮಾರ್ಚ್, ಏಪ್ರಿಲ್, ಮೇ ಮತ್ತು ಆಗಸ್ಟ್‌ನಲ್ಲಿ ನಡೆದಿರುತ್ತವೆ. ಅರ್ಜಿದಾರರರು ಹಣ ಹಿಂತಿರುಗಿಸಲು ಒಪ್ಪಿಕೊಂಡಿದ್ದಾರೆ. ಆದರೂ ಪೊಲೀಸರು ಇದೇ 17 ರಂದು ಪ್ರಕಣ ದಾಖಲಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಅರ್ಜಿದಾರರ ವಿರುದ್ಧದ ಎಲ್ಲಾ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದರು. ಅರ್ಜಿದಾರರು ದೂರುದಾರರಿಂದ 25 ಲಕ್ಷ ರೂಪಾಯಿಗಳನ್ನು ಪಡೆದಿದ್ದರು ಮತ್ತು ಚುನಾವಣಾ ಮತ್ತು ಅಭ್ಯರ್ಥಿಗಳ ಘೋಷಣೆಗೂ ಮುನ್ನ ಈ ವ್ಯವಹಾರ ನಡೆದಿದೆ ಎಂಬ ಆರೋಪವನ್ನು ನ್ಯಾಯಾಲಯ ಗಮನಿಸಿದೆ.












Click it and Unblock the Notifications