ಲೋಕಸಭಾ ಚುನಾವಣೆ ಹೊತ್ತಲಿ ಡಿ ಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ; ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು!
ಬೆಂಗಳೂರು, ಅಕ್ಟೋಬರ್ 19: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಿಬಿಐ ತನಿಖೆ ಸಂಬಂಧ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ್ದು, ಲೋಕಸಭಾ ಚುನಾವಣೆ ಹೊತ್ತಲಿ ಡಿ ಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಹೌದು, ಸಿಬಿಐ ತನಿಖೆ ರದ್ದು ಕೋರಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಇಂದು( ಗುರುವಾರ) ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ತೀರ್ಪು ನೀಡಿದೆ.

ಏನಿದು ಪ್ರಕರಣ?
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರು, 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು. ಇದೀಗ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದ್ದು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಮತ್ತೆ ಸಿಬಿಐ ತನಿಖೆ ಸಂಕಷ್ಟ ಎದುರಾಗಿದೆ.












Click it and Unblock the Notifications