ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಗೆ ಹೈಕೋರ್ಟ್ ನೋಟಿಸ್, ಯಾಕಾಗಿ ಗೊತ್ತಾ?
ದಾವಣಗೆರೆ,ಆಗಸ್ಟ್ 28: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಗ್ಯಾರೆಂಟಿ ಕಾರ್ಡ್ಗಳ ವಿತರಣೆ ಮಾಡುವ ಮೂಲಕ ಅಕ್ರಮಗಳನ್ನು ನಡೆಸಿ ಆಯ್ಕೆಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆ ನಿವಾಸಿ ಸುಭಾನ್ ಖಾನ್ ಅವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ಬುಧವಾರ ನಡೆಯಿತು.
ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆ ನಿವಾಸಿ ಸುಭಾನ್ ಖಾನ್ ಅವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ದಾವಣಗೆರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು. ಪ್ರಭಾ ಮಲ್ಲಿಕಾರ್ಜುನ್ ಅವರು ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಅಲ್ಲದೆ, ಮಹಿಳೆಯರಿಗೆ 1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರು. ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದ್ದು, ಮತದಾರರಿಗೆ ಲಂಚದ ಆಮಿಷವೊಡ್ಡಿದ್ದಾರೆ ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿ ಅವರು ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುವೆಂದು ಘೋಷಣೆ ಮಾಡಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದರು. ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆ.19ಕ್ಕೆ ನ್ಯಾಯಾಲಯ ಮುಂದೂಡಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ್ ಸ್ಪರ್ಧೆ ಮಾಡಿದ್ದರು. ಕ್ಷೇತ್ರದಲ್ಲಿ ಜನ ಕಾಂಗ್ರೆಸ್‌ಗೆ 6,33,059 ಹಾಗೂ ಬಿಜೆಪಿಗೆ 6,06,965 ಮತ ನೀಡಿದದರು. ಈ ಮೂಲಕ ಸಂಸದ ಸಿದ್ದೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಸೋಲುಂಡು ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದರು.
ಹಾಸನ ಸಂಸದರಿಗೂ ನೋಟಿಸ್
ಇನ್ನೂ ದಾವಣಗೆರೆ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮಾತ್ರವಲ್ಲದೇ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಅವರ ಆಯ್ಕೆಯನ್ನು ಅಸಿಂಧು ಮಾಡಬೇಕು ಎಂದು ಕೋರಿ ವಕೀಲ ಜಿ. ದೇವರಾಜೇಗೌಡ ಪುತ್ರ ಡಿ. ಚರಣ್‌ಗೌಡ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಶ್ರೇಯಸ್ ಪಟೇಲ್‌ಗೆ ಹೈಕೋರ್ಟ್ ಕಳೆದ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ. ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆ ನಡೆಸಿ, ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 30 ಕ್ಕೆ ಮುಂದೂಡಿತ್ತು.












Click it and Unblock the Notifications