ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿ ಪತ್ನಿ ಅರುಣಾಗೆ ನೋಟಿಸ್
ಬೆಂಗಳೂರು, ಏಪ್ರಿಲ್ 17: ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅಕ್ರಮ ಗಣಿಗಾರಿಕೆ ಆರೋಪದಿಂದ ಲಕ್ಷ್ಮೀ ಅರುಣಾ ಅವರ ಹೆಸರನ್ನು ಕೈಬಿಟ್ಟಿರುವುದಕ್ಕೆ ಪ್ರತಿವಾದಿಯಾಗಿರುವ ಸಿಬಿಐಗೆ ಕೂಡ ನೋಟಿಸ್ ಜಾರಿ ಮಾಡಲಾಗಿದೆ.
ಮೆಸರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯು ಅಕ್ರಮ ಗಣಿಗಾರಿಕೆ ನಡೆಸಿ ರಫ್ತು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಜನಾರ್ದನ ರೆಡ್ಡಿ ಅವರು ಮೊದಲ ಆರೋಪಿಯಾಗಿದ್ದರೆ, ಅವರ ಪತ್ನಿ ಎರಡನೆಯ ಆರೋಪಿಯಾಗಿದ್ದರು.

ತಮ್ಮ ವಿರುದ್ಧದ ಆರೋಪವನ್ನು ಕೈಬಿಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಅರುಣಾ, ತಾವು ಕಂಪೆನಿಯ ಪಾಲುದಾರಳೇ ಹೊರತು ಅದರ ಮಾಲೀಕತ್ವ ಹೊಂದಿಲ್ಲ. ಹೀಗಾಗಿ ಕಂಪೆನಿ ನಡೆಸಿದ ವ್ಯವಹಾರಗಳಿಗೆ ತಾವು ಹೊಣೆಯಾಗುವುದಿಲ್ಲ ಎಂದಿದ್ದರು. ಅವರ ವಾದವನ್ನು ಮಾನ್ಯ ಮಾಡಿದ್ದ ನ್ಯಾಯಾಲಯ 2015ರಲ್ಲಿ ಅರುಣಾ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶ ಹೊರಡಿಸಿತ್ತು.
ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಆಶಾದೀಪ್ ಸಂಸ್ಥೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಏಕಸದಸ್ಯ ನ್ಯಾಯಪೀಠ ನೋಟಿಸ್ ಜಾರಿ ಮಾಡಲು ಆದೇಶಿಸಿತು.
ಬುಧವಾರ ಸುದ್ದಿಗೋಷ್ಠಿ ನಡೆಸಿದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಅರುಣ ಮತ್ತು ಇತರರ ವಿರುದ್ಧ ದಾವೆ ಹೂಡಬಹುದಾಗಿದೆ ಎಂದು ತಿಳಿಸಿದರು.












Click it and Unblock the Notifications