Breaking: ಹಿಜಾಬ್ ಪ್ರಕರಣ; ಮಂಗಳವಾರ ಬೆಳಗ್ಗೆ 10.30ಕ್ಕೆ ಅಂತಿಮ ತೀರ್ಪು
ಬೆಂಗಳೂರು, ಮಾರ್ಚ್ 14; ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು. ಅನಂತರ ಅಂತಿಮ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ಪೀಠದಲ್ಲಿದ್ದಾರೆ.
Recommended Video

ಶಿಕ್ಷಣ ಸಂಸ್ಥೆಗಳಲ್ಲಿ ಸ್ಕಾರ್ಫ್ ಬಳಸುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ ಎಂದು ವಿದ್ಯಾರ್ಥಿಗಳ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಹಿಜಾಬ್ ಅನ್ನು ಸಂವಿಧಾನವು ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಅಡಿಯಲ್ಲಿ ರಕ್ಷಿಸಲಾಗಿದೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಉಲ್ಲಂಘನೆಯ ದೃಷ್ಟಿಯಿಂದ ಅದನ್ನು ನಿಷೇಧಿಸುವ ಅಧಿಕಾರವನ್ನು ಯಾವುದೇ ಕಾಲೇಜು ಅಭಿವೃದ್ಧಿ ಮಂಡಳಿ ಹೊಂದಿಲ್ಲ ಎಂದು ವಕೀಲರು ವಾದಿಸಿದ್ದಾರೆ.
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಬಳಿಕ ಕರ್ನಾಟಕದ ಹಲವು ಶಾಲಾ- ಕಾಲೇಜುಗಳಿಗೆ ಹಬ್ಬಿತ್ತು. ಈ ವಿವಾದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸದ್ದು ಮಾಡಿತ್ತು. ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್‌ನಲ್ಲಿ 13 ದಿನಗಳ ಕಾಲ ಚರ್ಚೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿರುವ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ.
ನಾಳೆ ಹೈಕೋರ್ಟ್ನಿಂದ ಹಿಜಾಬ್ ಪ್ರಕರಣದ ತೀರ್ಪು ಹಿನ್ನೆಲೆ ಸೋಮವಾರ ರಾತ್ರಿ 8.30ಕ್ಕೆ ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಸಲಾಗುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಳ್ಳಬೇಕಿರುವ ಭದ್ರತೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ವಿಚಾರ ಈಗ ಸಾಂವಿಧಾನಿಕ ಪ್ರಶ್ನೆಯಾಗಿ ಪರಿಣಮಿಸಿದ್ದು, ಹಿಜಾಬ್ ನಿರ್ಬಂಧ ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಫೆಬ್ರವರಿ 26ರಂದು ಮುಕ್ತಾಯಗೊಂಡಿದ್ದು, ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಮಂಗಳವಾರ ಇದರ ಅಂತಿಮ ತೀರ್ಪು ಹೊರ ಬೀಳಲಿದೆ. ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕೇ?, ಸಮವಸ್ತ್ರದ ಬಗ್ಗೆ ಸರ್ಕಾರ ನೀಡಿರುವ ಆದೇಶ ಕಾನೂನು ಬದ್ಧವಾಗಿದೆಯೇ? ಕಾಲೇಜು ಅಭಿವೃದ್ದಿ ಸಮಿತಿಗೆ ಸಮವಸ್ತ್ರ ನಿಗದಿಪಡಿಸುವ ಅಧಿಕಾರವಿದೆಯೇ ಎಂಬ ಪ್ರಶ್ನೆಗಳಿಗೆ ನಾಳೆಯೇ ಉತ್ತರ ಸಿಗಲಿದೆ.
ಮಂಗಳವಾರದಂದು ಹೈಕೋರ್ಟ್ನಿಂದ ಹಿಜಾಬ್ ಪ್ರಕರಣದ ತೀರ್ಪು ಹಿನ್ನೆಲೆ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್
ನಾಳೆ ಹಿಜಾಬ್ ಪ್ರಕರಣದ ತೀರ್ಪು ಹೈಕೋರ್ಟ್ನನಿಂದ ಹೊರಬೀಳುವ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಮಾಡಲು ಚಿಂತಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಶಾಲಾ, ಕಾಲೇಜುಗಳ ಮುಂದೆ ನಾಳೆ ಪೊಲೀಸ್ ಬಂದೋಬಸ್ತ್ ನಿಯೋಜನೆ ಕೈಗೊಳ್ಳವ ಬಗ್ಗೆ, ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ.
ಬನವಾಸಿ, ಹೊನ್ನಾವರ, ಭಟ್ಕಳ ತಾಲೂಕಿನ ಮೇಲೆ ಹೆಚ್ಚು ನಿಗಾ ಇಡಲು ಸೂಚಿಸಲಾಗಿದೆ. ಅಹಿತಕರ ಘಟನೆಗಳು ನಡೆಸುವ ವ್ಯಕ್ತಿಗಳ ಮೇಲೆ, ಸಂಘಟನೆಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡುವ ಬಗ್ಗೆ ಸೇರಿದಂತೆ ಇನ್ನು ಹೆಚ್ಚಿನ ಕ್ರಮಕ್ಕಾಗಿ ಇಂದು ರಾತ್ರಿ 8:30 ಕ್ಕೆ ಎಸ್ಪಿ, ಡಿಸಿ ಮೀಟಿಂಗ್ ನಡೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಸುಮನ್ ಪೆನ್ನೆಕರ್ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ಜಾರಿ
ನಾಳೆ ಹೈಕೋರ್ಟ್‌ನಲ್ಲಿ ಹಿಜಾಬ್ ತೀರ್ಪು ಪ್ರಕಟಿಸುವ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಎಂದಿನಂತೆ ಮುಂದುವರಿಯುತ್ತವೆ. ಆದರೆ ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಆದೇಶ ಹೊರಡಿಸಲಾಗಿದೆ.












Click it and Unblock the Notifications