Breaking News: ಕರ್ನಾಟಕ ವಿಧಾನ ಪರಿಷತ್, ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ
ಬೆಂಗಳೂರು, ಸೆಪ್ಟೆಂಬರ್ 19: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿದೆ.
ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣಾ ಆಯೋಗ ಗುರುವಾರ ಉಪ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 28ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು 3 ಅಕ್ಟೋಬರ್ ಕೊನೆಯ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 7 ಕೊನೆಯ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.
ಲೋಕಸಭೆ ಚುನಾವಣೆಯಲ್ಲಿ ಗೆಲುವು: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವಧಿ 5/1/2028ರ ತನಕ ಇತ್ತು. ಜೂನ್ 24ರಂದು ಅವರು ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವದ ಅವಧಿ ಪೂರ್ಣಗೊಳ್ಳದ ಕಾರಣ ಈಗ ಉಪ ಚುನಾವಣೆ ಎದುರಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರೂ ಸಹ ಅವರಿಗೆ ಬಿಜೆಪಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆ ಟಿಕೆಟ್ ನೀಡಿತ್ತು. ಅವರು 7,32,234 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ (4,73,059 ಮತ) ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
ಸಂಸದರಾದ ಬಳಿಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ್ದರು. ಈಗ ಅವರ ಸ್ಥಾನಕ್ಕೆ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ನಡೆಯುವ ಚುನಾವಣೆಗೆ ಬಿಜೆಪಿ ಟಿಕೆಟ್‌ಗೆ ಭಾರೀ ಪೈಪೋಟಿ ಇದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಕಾಂಕ್ಷಿಗಳು. ನಳಿನ್ ಕುಮಾರ್ ಹಾಲಿ ಸಂಸದರಾಗಿದ್ದರೂ ಸಹ 2024ರ ಚುನಾವಣೆಯಲ್ಲಿ ಅವರಿಗೆ ದಕ್ಷಿಣ ಕನ್ನಡದ ಟಿಕೆಟ್ ಕೈತಪ್ಪಿತ್ತು. ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ ಬಳಿಕ ಯಾವ ಚುನಾವಣೆ ಟಿಕೆಟ್ ಸಿಗದಿದ್ದರೂ ಸಹ ಪಕ್ಷದ ಪರವಾದ ಕೆಲಸವನ್ನು ಮಾಡುತ್ತಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಬಲ ಹೆಚ್ಚಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಸಹ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಯಾರಿಗೆ ಟಿಕೆಟ್ ನೀಡಲಾಗುತ್ತದೆ? ಎಂದು ಕಾದು ನೋಡಬೇಕಿದೆ. ಶೀಘ್ರದಲ್ಲಿಯೇ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.












Click it and Unblock the Notifications