2nd Phase Election: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ನಿಷೇಧಾಜ್ಞೆ, ದಿನಾಂಕ
ಬೆಂಗಳೂರು, ಮಾರ್ಚ್ 28: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗವು ಇಂದು ಗುರುವಾರ (ಮಾರ್ಚ್ 28) ಅಧಿಸೂಚನೆ ಪ್ರಕಟಿಸಿದೆ. ಇದರ ಬೆನ್ನಲ್ಲೆ ಇಂದಿನಿಂದ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ ಭಾಗದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಭಾಗದ ಅಭ್ಯರ್ಥಿಗಳು ಇಂದು ಮಾರ್ಚ್ 28 ರಿಂದ ಏಪ್ರೀಲ್ 04 ರವರೆಗೆ ನಾಮಪತ್ರ ಸಲ್ಲಿಸಬಹುದು.

ಏಪ್ರಿಲ್ 05 ರಂದು ಸಲ್ಲಿಕೆಯಾದ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 08 ರಂದು ನಾಮಪತ್ರ ವಾಪಾಸ್ ಪಡೆಯಲು ಅವಕಾಶ ಇರುತ್ತದೆ. ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ ಜರುಗಲಿದೆ. ಜೂನ್ 04ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಮಧ್ಯೆ ರೋಚಕ ಹಣಾಹಣಿ ಏರ್ಪಡುವ ಸಾಧ್ಯತೆ ಇದೆ. ಈಗಾಗಲೆ ಬಿಜೆಪಿಯು ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇತ್ತ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿಕೊಂಡಿದೆ.
ಏ.26ಕ್ಕೆ ಈ ಕ್ಷೇತ್ರಗಳಿಗೆ ಚುನಾವಣೆ
ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನೋಡುವ ಕ್ಷೇತ್ರಗಳೆಂದರೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಾಮರಾಜನಗರ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣೆ ಆಯೋಗ ಅಧಿಸೂಚನೆ ಘೋಷಿಸಿದ ಕೂಡಲೇ ಇಂದಿನಿಂದ ಏಪ್ರಿಲ್ 8ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಚುನಾವಣಾಧಿಕಾರಿಗಳ ಕಚೇರಿ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ ನಿಯಮಗಳು, ನೀತಿ ಸಂಹಿತೆ ಉಲ್ಲಂಘನೆ ಆದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು 144 ಸೆಕ್ಷನ್ ಅನ್ವಯ ಪ್ರತಿಬಂಧಕಾಜ್ಞೆಗೆ ಆದೇಶ ಹೊರಡಿಸಿದ್ದಾರೆ.












Click it and Unblock the Notifications