Lok Sabha Elections 2024: ಲೋಕಸಭಾ ಚುನಾವಣೆಗೆ ಮಕ್ಕಳನ್ನ ಕಣಕ್ಕಿಳಿಸಲು ಮಂತ್ರಿಗಳು ಸಜ್ಜು: ಇಲ್ಲಿದೆ ನೋಡಿ ಪಟ್ಟಿ
ಬೆಂಗಳೂರು, ನವೆಂಬರ್ 27: ವಿಧಾನಸಭಾ ಚುನಾವಣೆಯಲ್ಲಿ ಯಾರೂ ನಿರೀಕ್ಷೆ ಮಾಡದ ಫಲಿತಾಂಶವನ್ನ ಈ ಬಾರಿ ಕಾಂಗ್ರೆಸ್ ಕಂಡಿತ್ತು. ಮುಂದಿನ ಲೋಕಸಭಾ ಚುನಾವಣೆಗೂ ಕೂಡ ಈಗಿನಿಂದಲೂ ಕೂಡ ತಯಾರಿ ಮಾಡಿಕೊಳ್ಳುತ್ತಿದೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ರಾಜ್ಯ ಕಾಂಗ್ರೆಸ್, ಇದೀಗ 2024 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕೈ ಪಡೆ ಮಾಸ್ಟರ್ ಪ್ಲಾನ್ ನಡೆಸಿದೆ. ಇತ್ತ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ಬಾರೀ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ವರ್ಚಸ್ಸಿರುವ ಮಂತ್ರಿಗಳನ್ನ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.

ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನ ಹೊಡೆಯುವ ತಂತ್ರಗಾರಿಕೆಯನ್ನ ನಡೆಸಿದ್ದು, ಲೋಕಸಭಾ ಚುನಾವಣೆಗೆ ಸಮರ್ಥ ಸಚಿವರನ್ನ ಕಣಕ್ಕಿಳಿಸಲು ನಿರ್ಧರಿಸಿದ್ದು, ಒಂದು ವೇಳೆ ಆ ಸಚಿವರು ಲೋಕಸಮರದಲ್ಲಿ ಗೆಲುವು ಸಾಧಿಸಿದ್ರೆ, ಖಾಲಿಯಾಗುವ ಮಂತ್ರಿ ಸ್ಥಾನಗಳನ್ನು ಅಸಮಾಧಾನಗೊಂಡ ಶಾಸಕರಿಗೆ ಆ ಸ್ಥಾನವನ್ನ ನೀಡಿ ಅತೃಪ್ತಿ ಶಮನಕ್ಕೆ ಹೈಕಮಾಂಡ್ ಚಿಂತನೆ ನಡೆಸಿದೆ. ಆದರೆ, ಸಚಿವರು ತಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ತಮಗೆ ಸೂಚಿಸುವ ಕ್ಷೇತ್ರದಲ್ಲಿ ತಮ್ಮ ಮಕ್ಕಳನ್ನ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಮಗಳನ್ನ ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ತಯಾರಿ?
ಹೌದು, ಬೆಳಗಾವಿ ಭಾಗದಲ್ಲಿ ಹೆಚ್ಚು ಪ್ರಭಾವಿ ನಾಯಕರಾಗಿರುವ ಸತೀಶ್ ಜಾರಕಿಹೊಳಿ ಅವರನ್ನ ಈ ಬಾರೀ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. 2021 ರ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಗೆಲುವು ಸಾಧಿಸಿದ್ದು, ಈ ಬಾರಿ ಮಂಗಳಾ ಅಂಗಡಿಯವರ ವರ್ಚಸ್ಸು ಕ್ಷೇತ್ರದಲ್ಲಿ ಕಡಿಮೆಯಾಗಿದೆ ಎನ್ನಲಾಗಿದ್ದು, ಈ ಬಾರೀ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ರೆ, ಸುಲಭವಾಗಿ ಬೆಳಗಾವಿ ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.
ಇನ್ನೂ ಮುಂದಿನ ಅವಧಿಗೆ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದಿರುವ ಸತೀಶ್ ಜಾರಕಿಹೊಳಿ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಆಸಕ್ತಿ ಇಲ್ಲ. ಹೀಗಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನ ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಮೈಸೂರು ಕ್ಷೇತ್ರದಿಂದ ಸಿದ್ದರಾಮಯ್ಯ ಪುತ್ರ ಸ್ಪರ್ಧೆ!?
ವಿಧಾನಸಭಾ ಚುನಾವಣೆಯಲ್ಲಿ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಈ ಬಾರೀ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಒಂದು ವೇಳೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೈಸೂರಿನಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬೆಂ ದಕ್ಷಿಣ ಕ್ಷೇತ್ರದಿಂದ ಪುತ್ರಿಯನ್ನ ಕಣಕ್ಕಿಳಿಸಲು ರಾಮಲಿಂಗಾರೆಡ್ಡಿ ಪ್ಲಾನ್?
2023 ರ ಚುನಾವಣೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಡಿಮೆ ಅಂತರದಿಂದ ಸೋಲು ಕಂಡಿರುವ ಸಚಿವ ರಾಮಲಿಂಗಾರೆಡ್ಡಿಯವರ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿಯವರನ್ನ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ರಾಮಲಿಂಗರೆಡ್ಡಿ ಮುಂದಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಮುಂದೆಯೂ ಈ ಬಗ್ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಚಾಮರಾಜನಗರ ಕ್ಷೇತ್ರದಿಂದ ಪುತ್ರನ ಸ್ಪರ್ಧೆಗೆ ಮಹಾದೇವಪ್ಪ ಪ್ಲಾನ್?
ಹೆಚ್ ಸಿ ಮಹಾದೇವಪ್ಪ ಪುತ್ರ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಅವಕಾಶ ಸಿಕ್ಕರೆ ತಮ್ಮ ಪುತ್ರ ಸುನಿಲ್ ಬೋಸ್ ಸ್ಪರ್ಧೆ ಮಾಡುತ್ತಾನೆ ಎಂದು ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಬಹಿರಂಗವಾಗಿ ಹೇಳಿದ್ದಾರೆ. ಕಳೆದ ಮೂರು ಬಾರಿಯೂ ಸುನಿಲ್ ಬೋಸ್‌ಗೆ ಅವಕಾಶ ಸಿಕ್ಕಿಲ್ಲ. ಅದರೂ ಅವನು ಯಾವುದೇ ಬೇಸರವಿಲ್ಲದೆ ಪಕ್ಷ ಸಂಘಟನೆ ಮಾಡುತ್ತಿದ್ದಾನೆ. ಈ ಬಾರಿ ಅವಕಾಶ ಸಿಕ್ಕರೆ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದ್ದಾರೆ. ಅಲ್ಲದೇ ಪುತ್ರನನ್ನು ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಸುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.












Click it and Unblock the Notifications