Karnataka Weather: ಮುಂಗಾರು ದುರ್ಬಲ, ಮಳೆ ಕಡಿಮೆ: ಈ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕು ಕಳೆದುಕೊಂಡಿದ್ದು, ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಮುಂದಿನ ಒಂದು ವಾರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಶೇ.21ರಷ್ಟು ಮಳೆ ಕೊರತೆ
ಕಳೆದ ಒಂದು ವಾರದಲ್ಲಿ ಕರ್ನಾಟಕದ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದರೂ, ರಾಜ್ಯದ ಒಟ್ಟಾರೆ ಮಳೆ ಕೊರತೆ ಮಾತ್ರ ಗಣನೀಯವಾಗಿ ಕಡಿಮೆಯಾಗಿಲ್ಲ. ಜೂನ್ 1ರಿಂದ ಆರಂಭವಾದ ಮುಂಗಾರು ಅವಧಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್ 9ರವರೆಗಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ವಾಡಿಕೆಯ 656.7 ಮಿ.ಮೀ ಮಳೆಯಾಗಬೇಕಿದ್ದರೆ, ಇದುವರೆಗೆ 517.8 ಮಿ.ಮೀ ಮಳೆಯಷ್ಟೇ ದಾಖಲಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಒಟ್ಟಾರೆ ಶೇ.21ರಷ್ಟು ಮಳೆ ಕೊರತೆ ಉಂಟಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ಶೇ.34ರಷ್ಟು ಕೊರತೆ ದಾಖಲಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ 9ರವರೆಗೆ 127 ಮಿ.ಮೀ ಮಳೆಯಾಗಿದ್ದು, ಇದೇ ಅವಧಿಯಲ್ಲಿ 197 ಮಿ.ಮೀ ಮಳೆಯಾಗಬೇಕಿತ್ತು.
ಈ ಜಿಲ್ಲೆಗಳಲ್ಲಿ ಮಳೆ ಕೊರತೆ ಹೆಚ್ಚು
ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯ ಅರ್ಧಕ್ಕಿಂತಲೂ ಕಡಿಮೆ ಮಳೆಯಾಗಿದೆ. ವಿಜಯನಗರದಲ್ಲಿ ಶೇ.58 ಹಾಗೂ ಮೈಸೂರಿನಲ್ಲಿ ಶೇ.51ರಷ್ಟು ಮಳೆ ಕೊರತೆ ದಾಖಲಾಗಿದೆ. ಇನ್ನು ಚಾಮರಾಜನಗರದಲ್ಲಿ ಶೇ.47, ಕೋಲಾರದಲ್ಲಿ ಶೇ.42 ಹಾಗೂ ಬಳ್ಳಾರಿಯಲ್ಲಿ ಶೇ.41ರಷ್ಟು ಮಳೆ ಕೊರತೆ ಕಂಡುಬಂದಿದೆ. ಹೀಗಾಗಿ ಈ ಜಿಲ್ಲೆಗಳು ತೀವ್ರ ಮಳೆ ಕೊರತೆಯನ್ನು ಎದುರಿಸುತ್ತಿವೆ.
ಮಲೆನಾಡಿನಲ್ಲೂ ಆತಂಕ
ರಾಜ್ಯದ ಪ್ರಮುಖ ನದಿಗಳ ಜಲಾನಯನ ಪ್ರದೇಶವಾಗಿರುವ ಮಲೆನಾಡು ಜಿಲ್ಲೆಗಳಲ್ಲೂ ಮಳೆ ಕೊರತೆ ಮುಂದುವರಿದಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಸುಮಾರು ಶೇ.31ರಿಂದ 34ರಷ್ಟು ಕಡಿಮೆ ಮಳೆಯಾಗಿದೆ. ಇತ್ತೀಚೆಗೆ ಕೆಲವೆಡೆ ಸುರಿದ ಮಳೆಯಿಂದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿ, ನೀರಿನ ಮಟ್ಟದಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಆದರೆ ರಾಜ್ಯದ ಒಟ್ಟಾರೆ ಮಳೆ ಕೊರತೆ ಇನ್ನೂ ಮುಂದುವರಿದಿರುವುದರಿಂದ ರೈತರು ಮತ್ತು ಜಲಸಂಪನ್ಮೂಲ ಇಲಾಖೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ.
ನಾಳೆ (ಆಗಸ್ಟ್ 12) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.


Click it and Unblock the Notifications
