ಶಾಂತಿಯುತ ಮತದಾನಕ್ಕಾಗಿ ಪೊಲೀಸರು ರೆಡಿ
ಬೆಂಗಳೂರು, ಏ. 14 : ಲೋಕಸಭೆ ಚುನಾವಣೆ ಮತದಾನಕ್ಕೆ ಮೂರು ದಿನಗಳು ಬಾಕಿ ಉಳಿದಿವೆ. ಕರ್ನಾಟಕ ಪೊಲೀಸರು ಶಾಂತಿಯುತ ಮತದಾನಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯಲಿರುವ ಒಂದೇ ಹಂತದ ಮತದಾನದ ಭದ್ರತೆಗಾಗಿ 60 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಎನ್.ರೆಡ್ಡಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಶಾಂತಿಯುತ ಮತದಾನಕ್ಕಾಗಿ ಇಲಾಖೆ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಹೇಳಿದರು.

ಚುನಾವಣೆಯ ಕಾರ್ಯಕ್ಕಾಗಿ ಒಟ್ಟು 60 ಸಾವಿರ ವಿವಿಧ ದರ್ಜೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಎಂ.ಎನ್.ರೆಡ್ಡಿ ಹೇಳಿದರು. 28 ಕ್ಷೇತ್ರಗಳಲ್ಲಿ ಒಟ್ಟು 54,294 ಮತಗಟ್ಟೆಗಳಿವೆ. ಈ ಪೈಕಿ 8,658 ಅತಿಸೂಕ್ಷ್ಮ, 14,440 ಮತಗಟ್ಟೆಗಳನ್ನು ಸೂಕ್ಷ ಮತ್ತು 38,196 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ ಎಂದರು.
40 ಕೆಎಸ್ಆರ್ ಪಿ ತುಕಡಿ, 14,458 ಗೃಹ ರಕ್ಷಕ ದಳದ ಸಿಬ್ಬಂದಿ ಮತ್ತು 1200 ನಾಗರಿಕ ರಕ್ಷಣಾ ದಳ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗಿದೆ ಎಂದು ಹೇಳಿದರು. ರಾಜ್ಯದ 28 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿರುವುದರಿಂದ ಇಲಾಖೆಯು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲೂ ಬಿಗಿ ಭದ್ರತೆ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ ಹಾಗೂ ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಭದ್ರತೆಗಾಗಿ 75 ಕೆಎಸ್ಆರ್ ಪಿ ತುಕಡಿ, 11,236 ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು.
ಬೆಂಗಳೂರಿನ ವ್ಯಾಪ್ತಿಯಲ್ಲಿ ಒಟ್ಟು 6,823 ಮತಗಟ್ಟೆಗಳಿವೆ. ಇವುಗಳಲ್ಲಿ 1361 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದ್ದು, 2044 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ರಾಘವೇಂದ್ರ ಔರಾದ್ಕರ್ ಹೇಳಿದರು.












Click it and Unblock the Notifications