ರಾಹುಲ್ ಗಾಂಧಿ ಹೇಳಿದ ಮಾತು ಉಳಿಸಿಕೊಂಡ ಸಿದ್ದರಾಮಯ್ಯ; ಸಿಎಂ ಸ್ಥಾನಕ್ಕೆ ಏನಾಗಿತ್ತು?
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ವಿಚಾರ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿರುವ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿ ಯಾವಾಗ ಹೇಳುತ್ತಾರೋ ಆಗ ಮುಖ್ಯಮಂತ್ರಿ ಸ್ಥಾನವನ್ನು ಬಿಡುತ್ತೇನೆ ಎಂದು ತಾನು ನಾಲ್ಕೈದು ಬಾರಿ ಹೇಳಿದ್ದೆ. ಇದೀಗ ಆ ಮಾತನ್ನು ಉಳಿಸಿಕೊಂಡು ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದ್ದಾರೆ.
ವರುಣಾ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಿಳಾ ವಸತಿ ನಿಲಯದ ಉದ್ಘಾಟನೆ ಹಾಗೂ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಯವರು ಯಾವಾಗ ಹೇಳುತ್ತಾರೋ ಆಗ ಮುಖ್ಯಮಂತ್ರಿ ಸ್ಥಾನವನ್ನು ಬಿಡುತ್ತೇನೆ ಎಂದು ನಾನು ನಾಲ್ಕೈದು ಬಾರಿ ಹೇಳಿದ್ದೆ. ಆ ಮಾತನ್ನು ಉಳಿಸಿಕೊಂಡು ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದರು.

2023ರ ಮೇ 23ರಂದು ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದೆ. 2026ರ ಮೇ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದರು. 2013ರಿಂದ 2018ರವರೆಗೆ ಹಾಗೂ 2023ರಿಂದ 2026ರ ಮೇ 26ರವರೆಗೆ ಸೇರಿದಂತೆ ಒಟ್ಟಾರೆ ಎಂಟು ವರ್ಷಕ್ಕೂ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದೇನೆ. ಇದೀಗ ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿದ್ದೇನೆ ಎಂದು ತಿಳಿಸಿದರು.
ವರುಣಾ ಜನರ ಸೇವೆ ಮರೆಯುವುದಿಲ್ಲ
ಅಧಿಕಾರ ಇರಲಿ ಅಥವಾ ಅಧಿಕಾರ ಇಲ್ಲದಿರಲಿ, ವರುಣಾ ಜನರ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ತಾವು ಶಾಸಕನಾಗಿರಲಿ ಅಥವಾ ಇಲ್ಲದಿರಲಿ, ಜನರ ಸೇವೆ ಮಾಡುವ ಕೆಲಸವನ್ನು ಮುಂದುವರಿಸುತ್ತೇನೆ. ವರುಣಾ ಕ್ಷೇತ್ರದ ಜನರನ್ನು ಯಾವುದೇ ಕಾರಣಕ್ಕೂ ಮರೆಯುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ನಾನು ಮೂರು ಬಾರಿ ವರುಣಾ ಕ್ಷೇತ್ರದಿಂದ ಗೆದ್ದಾಗ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. 2013ರಲ್ಲಿ ಮುಖ್ಯಮಂತ್ರಿಯಾದೆ, 2023ರಲ್ಲೂ ಮುಖ್ಯಮಂತ್ರಿಯಾದೆ. 2008ರಲ್ಲಿ ಗೆದ್ದಾಗ ವಿರೋಧ ಪಕ್ಷದ ನಾಯಕನಾಗಿದ್ದೆ. 2018ರಲ್ಲೂ ವಿರೋಧ ಪಕ್ಷದ ನಾಯಕನಾಗಿದ್ದೆ. ಹೀಗಾಗಿ ನಾನು ಗೆದ್ದ ಮೂರು ಸಂದರ್ಭಗಳಲ್ಲಿ ಎರಡು ಬಾರಿ ಮುಖ್ಯಮಂತ್ರಿ ಮತ್ತು ಎರಡು ಬಾರಿ ವಿರೋಧ ಪಕ್ಷದ ನಾಯಕರಾಗುವ ಅವಕಾಶ ದೊರೆತಿದೆ ಎಂದು ಹೇಳಿದರು.
ಜನರ ಆಶೀರ್ವಾದ ಮತ್ತು ಬೆಂಬಲವೇ ಕಾರಣ
ವರುಣಾ ಕ್ಷೇತ್ರದ ಜನರನ್ನು ಮತ್ತು ಮತದಾರರನ್ನು ಯಾವುದೇ ಕಾರಣಕ್ಕೂ ಮರೆಯಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಇಂದು ನನಗೆ ಏನಾದರೂ ಶಕ್ತಿ ಇದ್ದರೆ ಅದು ವರುಣಾ ಕ್ಷೇತ್ರದ ಜನತೆ ಧಾರೆ ಎರೆದ ಶಕ್ತಿಯೇ ಕಾರಣ. ರಾಜ್ಯದಲ್ಲಿ ನಾನು ಏನಾದರೂ ಕೆಲಸ ಮಾಡಿದ್ದರೆ, ನುಡಿದಂತೆ ನಡೆದಿದ್ದರೆ ಅದಕ್ಕೆ ಜನರ ಆಶೀರ್ವಾದ ಮತ್ತು ಬೆಂಬಲವೇ ಕಾರಣ ಎಂದು ಹೇಳಿದರು.
ನಾನು ಮೊದಲ ಬಾರಿಗೆ 2013ರಲ್ಲಿ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಲಾಗಿತ್ತು. ಆ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಇದಲ್ಲದೆ ಸುಮಾರು 20ರಿಂದ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಕಾರ್ಯಕ್ರಮ ಆಗಲೇ ಪ್ರಾರಂಭಿಸಲಾಗಿತ್ತು. ಅನ್ನಭಾಗ್ಯ, ಕೃಷಿ ಭಾಗ್ಯ, ಕ್ಷೀರಭಾಗ್ಯ, ಶಾದಿಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಸಮಾಜದಲ್ಲಿರುವ ಬಡವರು ಯಾವುದೇ ಜಾತಿಗೆ ಸೇರಿರಲಿ, ಯಾವುದೇ ಧರ್ಮಕ್ಕೆ ಸೇರಿದವರಾಗಿರಲಿ, ಎಲ್ಲ ಬಡವರನ್ನು ಗುರುತಿಸಿ ಅವರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ನೀಡುವ ಕೆಲಸವನ್ನು ಮಾಡಲಾಗಿದೆ. 2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. ಅಧಿಕಾರಕ್ಕೆ ಬಂದ ಒಂದೇ ವರ್ಷದೊಳಗೆ ಐದು ಗ್ಯಾರಂಟಿ ಯೋಜನೆಗಳನ್ನೂ ಜಾರಿಗೆ ತರಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಐದು ಗ್ಯಾರಂಟಿಗಳಲ್ಲಿ ಮೊದಲನೆಯದು ಶಕ್ತಿ ಯೋಜನೆ. ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ ಎಂದು ಹೇಳಿದರು.
Karnataka politics: ಯಜಮಾನಿಗೆ ಪ್ರತಿ ತಿಂಗಳು 2,000 ರೂ.
ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಇದರಿಂದ ಮಹಿಳೆಯರು ತಮ್ಮ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಮನೆಯ ಅಗತ್ಯಗಳಿಗೆ ಹಣ ಬಳಸಿಕೊಳ್ಳಲು ಸಾಧ್ಯವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಒಂದು ವರ್ಷಕ್ಕೆ 32 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ವಿದ್ಯುತ್ ಬಳಕೆ ಮಾಡುವವರು ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ. ಸಮಾಜದಲ್ಲಿ ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಕಡಿಮೆಯಾಗಬೇಕು, ಬಡವರ ಕೈಯಲ್ಲಿ ಹಣ ಉಳಿಯಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
ಅನ್ನಭಾಗ್ಯ ಯೋಜನೆಯ ಬಗ್ಗೆಯೂ ವಿವರಿಸಿದ ಅವರು, 2013ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಏಳು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಬಡವರು ಹೊಟ್ಟೆ ತುಂಬಾ ಊಟ ಮಾಡಬೇಕು, ಯಾರೂ ಊಟವಿಲ್ಲದೆ ಮಲುಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿತ್ತು. 2023ರಲ್ಲಿ ಮತ್ತೆ ಅಧಿಕಾರಕ್ಕೆ ಬಂದಾಗ ಏಳು ಕೆ.ಜಿ.ಯಿಂದ 10 ಕೆ.ಜಿ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಯಿತು.
ಇದರ ಜೊತೆಗೆ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯೋಗ ದೊರೆಯದ ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡುವ ಕೆಲಸವನ್ನು ಮಾಡಲಾಗಿದೆ. ಒಟ್ಟಾರೆಯಾಗಿ ಸಮಾಜದಲ್ಲಿರುವ ಎಲ್ಲ ಬಡವರಿಗೂ ಗ್ಯಾರಂಟಿ ಯೋಜನೆಗಳ ಮೂಲಕ ಪ್ರಯೋಜನ ದೊರೆಯುವಂತೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
Karnataka politics: ಎಂಟು ಬಾರಿ ಗೆದ್ದಿದ್ದೇನೆ.
ತಾವು 40 ವರ್ಷಗಳಿಗೂ ಹೆಚ್ಚು ಕಾಲ ರಾಜಕೀಯದಲ್ಲಿದ್ದು, ಈ ಅವಧಿಯಲ್ಲಿ ಎಂಟು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಸೋಲು ಮತ್ತು ಗೆಲುವು ಎರಡನ್ನೂ ಕಂಡಿದ್ದೇನೆ. ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹಾಗೂ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದೇನೆ. ಎಂಟು ಬಾರಿ ಗೆದ್ದಿದ್ದೇನೆ. ತಮ್ಮ ಮೇಲಿರುವ ಜನರ ಆಶೀರ್ವಾದದಿಂದಲೇ ಎಂಟು ಬಾರಿ ಗೆಲ್ಲಲು ಸಾಧ್ಯವಾಗಿದೆ ಎಂದು ಹೇಳಿದರು.
ರಾಜಕೀಯದಲ್ಲಿ ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಹಾಗೂ ವಿರೋಧ ಪಕ್ಷದ ನಾಯಕರಾಗಿ ಜನರ ಕೆಲಸ ಮಾಡಲು ಸಾಧ್ಯವಾಗಿದ್ದರೆ, ಅದಕ್ಕೆ ಜನರು ನೀಡಿದ ಶಕ್ತಿಯೇ ಕಾರಣ. ವರುಣಾ ಕ್ಷೇತ್ರದ ನಾಲ್ಕು ಅವಧಿಗಳಲ್ಲಿ ಸುಮಾರು 5,034 ಕೋಟಿ ರೂ.ಗಳ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಇದಕ್ಕಾಗಿ ತಮಗೆ ತೃಪ್ತಿ ಮತ್ತು ಸಂತೋಷವಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಾನು ನುಡಿದಂತೆ ನಡೆದಿದ್ದೇನೆ. ಬಡವರ ಕೆಲಸ ಮಾಡಲು ಪ್ರಯತ್ನಿಸಿದ್ದೇನೆ. ಅಸಮಾನತೆಯನ್ನು ಹೋಗಲಾಡಿಸಲು ಪ್ರಯತ್ನಿಸಿದ್ದೇನೆ. ಸಮಾನ ಸಮಾಜವನ್ನು ನಿರ್ಮಾಣ ಮಾಡುವ ಕೆಲಸವನ್ನು ಮಾಡುತ್ತಿದ್ದೇನೆ. ಈ ಪ್ರಯತ್ನವನ್ನು ಮುಂದುವರಿಸುವುದಾಗಿ ಅವರು ಹೇಳಿದರು.
ಇಂದು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ. ನಾನು ಜಾರಿಗೆ ತಂದಿರುವ ಎಲ್ಲ ಕೆಲಸಗಳು ಮತ್ತು ಕಾರ್ಯಕ್ರಮಗಳನ್ನು ಅವರು ಮುಂದುವರಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸ ಮತ್ತು ನಂಬಿಕೆ ಇದೆ. ಈಗಾಗಲೇ ಅವರು ಪಕ್ಷದ ಕಾರ್ಯಕ್ರಮಗಳನ್ನು ಜಾರಿಗೆ ತರಲು ಪ್ರಾರಂಭಿಸಿದ್ದಾರೆ. ಮುಂದೆಯೂ ಅವರು ಈ ಕಾರ್ಯಕ್ರಮಗಳನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದರು.
ವರುಣಾ ಕ್ಷೇತ್ರದಲ್ಲಿ 183 ಕೋಟಿ ರೂ. 64 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಮುಂದಿನ ದಿನಗಳಲ್ಲೂ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುವುದಾಗಿ ಅವರು ಹೇಳಿದರು.
ನಾನು ಇನ್ನೂ ಒಂದೂವರೆ ವರ್ಷ ಶಾಸಕನಾಗಿ ಮುಂದುವರಿಯಲಿದ್ದು, 2028ರವರೆಗೆ ಶಾಸಕನಾಗಿರುತ್ತೇನೆ. ಅಲ್ಲಿಯವರೆಗೆ ವರುಣಾ ಕ್ಷೇತ್ರದ ಜನರ ಕೆಲಸ ಮಾಡಿಕೊಡುತ್ತೇನೆ ಮತ್ತು ಅವರ ಜೊತೆಯಲ್ಲಿರುತ್ತೇನೆ. ನನ್ನ ಮೇಲಿರುವ ಜನರ ಪ್ರೀತಿ, ಅಭಿಮಾನ ಮತ್ತು ಆಶೀರ್ವಾದ ಈಗಿರುವಂತೆ ಮುಂದೆಯೂ ಇರಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.
ಯತೀಂದ್ರ ಸಿದ್ದರಾಮಯ್ಯ ಅವರು ರಾಜಕಾರಣದಲ್ಲಿ ಮುಂದುವರಿದಿದ್ದು, ಇದೀಗ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರ ಮೇಲೂ ವರುಣಾ ಕ್ಷೇತ್ರದ ಜನರ ಮಾರ್ಗದರ್ಶನ, ಅಭಿಮಾನ, ಪ್ರೀತಿ ಮತ್ತು ಆಶೀರ್ವಾದ ಇರಬೇಕು ಎಂದು ಸಿದ್ದರಾಮಯ್ಯ ಹೇಳಿದರು.


Click it and Unblock the Notifications
