Almatti Dam: ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ! ಕೇಂದ್ರಕ್ಕೆ ಬಿಜೆಪಿ ಸಂಸದರ ನಿಯೋಗ ಮನವರಿಕೆ
ನವದೆಹಲಿ, ಆಗಸ್ಟ್ 07: ಕೃಷ್ಣ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಅಣೆಕಟ್ಟು ಎತ್ತರವನ್ನು 05 ಅಡಿ ಹೆಚ್ಚಳ ಮಾಡಬೇಕೆಂದು ಕರ್ನಾಟಕ ನಿರ್ಧರಿಸಿದೆ. ಇದಕ್ಕೆ ತಡೆ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದ ಬೆನ್ನಲ್ಲೆ ರಾಜ್ಯದ ಬಿಜೆಪಿ ಸಂಸದರ ನಿಯೋಗ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್. ಪಾಟೀಲ ಅವರನ್ನು ಭೇಟಿ ಮಾಡಿ ಮಹತ್ವದ ವಿಷಯಗಳನ್ನು ತಿಳಿಸಿದೆ.
ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರದ ಕ್ಯಾತೆ ದುರುದ್ದೇಶ ಖಂಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿ ನಿಯೋಗ ಭೇಟಿ ಬಗ್ಗೆ ಮಾಹಿತಿ ನೀಡಿದರು. ಕೃಷ್ಣಾ ಮೇಲ್ಮಂಡೆ ಯೋಜನೆ 2ನೇ ಹಂತದಲ್ಲಿ ಆಲಮಟ್ಟಿ ಆಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ಅನವಶ್ಯಕ ಕ್ಯಾತೆ ತೆಗೆಯುತ್ತಿರುವುದು ಖಂಡನೀಯ. ಕೃಷ್ಣಾ ನ್ಯಾಯಾಧೀಕರಣದ ಆದೇಶದಂತೆ ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳ ಮಾಡುವುದು ಕರ್ನಾಟಕದ ಹಕ್ಕು ಎಂಬುದನ್ನು ಬಿಜೆಪಿ ನಿಯೋಗ ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದೆ ಎಂದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮಹಾರಾಷದ ಸಂಸದರು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಆಲಮಟ್ಟಿ ಜಲಾಶಯದ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅದರ ವಿರುದ್ಧ ಗುರುವಾರಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರೊಂದಿಗೆ ಬಿಜೆಪಿ ಸಂಸದರ ನಿಯೋಗ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಹಾಗೂ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿತು. ನಿಯೋಗದಲ್ಲಿ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ, ಪಿ.ಸಿ. ಗದ್ದಿಗೌಡರ, ರಮೇಶ ಜಿಗಜಿಣಗಿ ಇದ್ದರು. ಅವರೆಲ್ಲ ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಳ ಮಾಡಲು ಮಹಾರಾಷ್ಟ್ರ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆಂದು ಬೊಮ್ಮಾಯಿ ಮಾಹಿತಿ ನೀಡಿದರು.
ಎತ್ತರ ಹೆಚ್ಚಳದಿಂದ ಪ್ರವಾಹ ಉಂಟಾಗಲ್ಲ
ಕೃಷ್ಣಾ ನ್ಯಾಯಾಧೀಕರಣ 2 ರಲ್ಲಿ ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್‌ಗೆ ಹೆಚ್ಚಳ ಮಾಡಲು ಒಪ್ಪಿಗೆ ಕೊಟ್ಟಿದೆ. ಇದಕ್ಕೂ ಪೂರ್ವದಲ್ಲಿ ಕೇಂದ್ರ ಹಾಗೂ ಮೂರು ರಾಜ್ಯಗಳ ತಂಡದಿಂದ ಜಂಟಿ ಸಮೀಕ್ಷೆ ಮಾಡಿ, ಹೈಡಾಲಜಿಕಲ್ ಸ್ಟಡಿ ಮಾಡಿ ಡ್ಯಾಮ್‌ನಿಂದ ಪ್ರವಾಹ ಉಂಟಾಗುವುದಿಲ್ಲ ಎಂದು ಹೇಳಿದ್ದಾರೆ.

2005 ರಲ್ಲಿ ಪ್ರವಾಹ ಆದಾಗ ಕೇಂದ್ರ ಜಲ ಆಯೋಗವೂ ಕೂಡ ಸಾಂಗ್ಲಿ ಮತ್ತು ಕೊಲ್ಲಾಪುರದಲ್ಲಿ ಡ್ಯಾಮ್‌ನಿಂದ ಪ್ರವಾಹ ಆಗುವುದಿಲ್ಲ ಎಂದು ಹೇಳಿದೆ. ಹೀಗಾಗಿ ಮಹಾರಾಷ್ಟ್ರ ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳ ಮಾಡಲು ಕ್ಯಾತೆ ತೆಗೆದಿರುವುದು ಸರಿಯಲ್ಲ ಮತ್ತು ದುರುದ್ದೇಶದಿಂದ ಕೂಡಿದೆ ಎಂದು ಅವರು ವಿವರಿಸಿದರು.
ನ್ಯಾಯ ಮಂಡಳಿ ಆದೇಶ ಸುಪ್ರೀಂ ಕೋರ್ಟ್ ಡಿಕ್ರಿ ಇದ್ದ ಹಾಗೆ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಮಾಡುವುದು ನಮ್ಮ ಹಕ್ಕು. ನಮ್ಮ ಹಕ್ಕನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿ ಕೊಟ್ಟಿದ್ದೇವೆ. ಅವರು ಗೆಜೆಟ್ ನೋಟಿಫಿಕೇಶನ್ ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯದ ಆದೇಶದಂತೆ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮೀರಿ ಏನೂ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಆದಷ್ಟು ಬೇಗನೇ ವಿಚಾರಣೆಗೆ ಬರುವಂತೆ ಮಾಡಿ ಗೆಜೆಟ್ ನೋಟಿಫೀಕೇಶನ್ ಹೊರಡಿಸುವಂತೆ ಮಾಡಿಸಲು ತಮ್ಮ ಎಲ್ಲ ಶಕ್ತಿ ಉಪಯೋಗಿಸಬೇಕು ಎಂದು ತಿಳಿಸಿದರು.
ಅಂತಾರಾಜ್ಯ ಜಲ ವಿವಾದ ಕಾಯ್ದೆ ಸಷ್ಟ..
ಆಲಮಟ್ಟಿ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಾರಾಜ್ಯ ಜಲ ವಿವಾದ ಕಾಯ್ದೆ ಸಷ್ಟವಾಗಿದೆ. ಸೆಕ್ಸೆನ್ 3 ಪ್ರಕಾರ ದೂರು ಕೊಟ್ಟ ಮೇಲೆ ಕೇಂದ್ರ ಸರ್ಕಾರ ನ್ಯಾಯಮಂಡಳಿ ರಚನೆ ಮಾಡಿ, ನ್ಯಾಯ ಮಂಡಳಿ ಎರಡೂ ಕಡೆ ವಿಚಾರಣೆ ನಡೆಸಿ ಆದೇಶ ಹೊರಡಿಸಿದರೆ ಅದು ಸುಪ್ರೀಂ ಕೋರ್ಟ್ ಡಿಕ್ರಿ ಇದ್ದ ಹಾಗೆ. ಉದಾಹರಣೆಗೆ ಕಾವೇರಿ ವಿಚಾರದಲ್ಲಿ ಸುಮಾರು ಹತ್ತು ಹನ್ನೆರಡು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಹೇಳಿತ್ತು. ಸಂವಿಧಾನದಲ್ಲಿ ಸುಪ್ರೀಂ ಕೋರ್ಟ್‌ಗೆ ಕೆಲವು ಅಧಿಕಾರವಿದೆ. ಅದನ್ನು ಸುಪ್ರೀಂ ಕೋರ್ಟ್ ಬಳಕೆ ಮಾಡುತ್ತದೆ ಎಂದರು.












Click it and Unblock the Notifications