Karnataka Rain: ಕರ್ನಾಟಕದಲ್ಲಿ ಶೇ.39 ಮಳೆ ಕೊರತೆ; ಜಲಾಶಯಗಳಲ್ಲಿ ಕೇವಲ ಶೇ.40 ನೀರು, 158 ತಾಲ್ಲೂಕುಗಳಲ್ಲಿ ಬರದ ಛಾಯೆ
Karnataka Rain: ಕರ್ನಾಟಕದಲ್ಲಿ ಜುಲೈ 18ರವರೆಗೆ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ.39ರಷ್ಟು ಕಡಿಮೆಯಾಗಿದೆ. ಮಲೆನಾಡಿನಲ್ಲಿ ಅತ್ಯಧಿಕ ಶೇ. 43%, ಕರಾವಳಿಯಲ್ಲಿ ಶೇ. 35%, ಉತ್ತರ ಒಳನಾಡಿನಲ್ಲಿ ಶೇ.33% ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.31% ರಷ್ಟು ಮಳೆ ಕೊರತೆ ದಾಖಲಾಗಿದೆ. 26 ಜಿಲ್ಲೆಗಳ ಒಟ್ಟು 158 ತಾಲ್ಲೂಕುಗಳಲ್ಲಿ ಕೊರತೆ ಹಾಗೂ 20 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಕಂಡು ಬಂದಿದೆ. 51 ತಾಲೂಕುಗಳಲ್ಲಿ ಮಾತ್ರ ವಾಡಿಕೆ ಮಳೆಯಾಗಿದೆ. ವಿಜಯನಗರ ಜಿಲ್ಲೆ ತೀವ್ರ ಮಳೆ ಕೊರತೆ (-67%) ದಾಖಲಿಸಿದೆ ಎಂದು ಸರ್ಕಾರ ಹೇಳಿದೆ.
ಕರ್ನಾಟಕದಲ್ಲಿ 169 ಹೋಬಳಿಗಳಲ್ಲಿ ವಾಡಿಕೆ ಮಳೆಯಾಗಿದ್ದು, 509 ಹೋಬಳಿಗಳಲ್ಲಿ ಕೊರತೆ ಹಾಗೂ 118 ಹೋಬಳಿಗಳಲ್ಲಿ ತೀವ್ರ ಕೊರತೆ ದಾಖಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳೆದ ವರ್ಷಕ್ಕೆ ಹೋಲಿಸಿದರೆ ಬಹಳ ಕಡಿಮೆಯಾಗಿದ್ದು, ಒಟ್ಟಾರೆಯಾಗಿ ಶೇ.40 ರಷ್ಟು ಮಾತ್ರ ನೀರು ಸಂಗ್ರಹವಿದೆ. ಪ್ರಸ್ತುತ ಒಟ್ಟಾರೆ ಶೇ.359.98 ಟಿಎಂಸಿ ನೀರು ಸಂಗ್ರಹವಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 681.83 ಟಿಎಂಸಿ ನೀರು ಸಂಗ್ರಹವಿತ್ತು. ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಒಟ್ಟು ಸಾಮರ್ಥ್ಯದ ಕೇವಲ ಸರಾಸರಿ ಶೇ.23 ರಷ್ಟು ನೀರು ಸಂಗ್ರಹವಿದೆ. ಕಾವೇರಿ ಕಣಿವೆಯ ಜಲಾಶಯಗಳಲ್ಲಿ ಸರಾಸರಿ ಶೇ.51 ಹಾಗೂ ಕೃಷ್ಣಾ ಕಣಿವೆ ಜಲಾಶಯಗಳಲ್ಲಿ ಸರಾಸರಿ ಶೇ.48 ರಷ್ಟು ನೀರು ಸಂಗ್ರಹವಿದೆ. ಜಲಾಶಯಗಳಲ್ಲಿನ ಒಟ್ಟಾರ ಒಳ ಹರಿವು 52,108 ಕ್ಯೂಸೆಕ್ಸ್ ಇದೆ.

ಪ್ರಸ್ತುತ 122 ತಾಲ್ಲೂಕುಗಳ 539 ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 112 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಇದುವರೆಗೆ 118 ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗಿದೆ. 725 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 622 ಹಳ್ಳಿಗಳಿಗೆ ನೀರು ಪೂರೈಕೆ ಮಾಡಲಾಗಿದೆ. ಒಟ್ಟು 17 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 87 ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಬಾಡಿಗೆಗೆ ಪಡೆದ ಬೋರ್‌ವೆಲ್‌ಗಳ ಮೂಲಕ 24 ವಾರ್ಡ್‌ಗಳಿಗೆ ನೀರು ಸರಬರಾಜು ಮಾಡಲಾಗುತ್ತಿದ್ದು, 20 ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದೆ.
ಕರ್ನಾಟಕದಲ್ಲಿ ಪ್ರಸ್ತುತ 84.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಇದುವರೆಗೆ 43.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಇದೇ ಅವಧಿಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಸರಾಸರಿ 51.33 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳಲಾಗಿತ್ತು. ಕುಡಿಯುವ ನೀರಿನ ಪೂರೈಕೆಯನ್ನು ಖಾತ್ರಿಪಡಿಸಲು ಪ್ರತಿ ವಿಧಾನಸಭಾ ವ್ಯಾಪ್ತಿಗೆ ಹೆಚ್ಚುವರಿಯಾಗಿ ತಲಾ 1ಕೋಟಿ ರೂಪಾಯಿ ಒದಗಿಸಲಾಗುವುದು. ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಎಲ್ಲಾ ಜಿಲ್ಲಾಧಿಕಾರಿಗಳು Pro Active ಕ್ರಮ ಕೈಗೊಳ್ಳಬೇಕು.
ಜಲಾಶಯಗಳ ಪರಿಸ್ಥಿತಿಯನ್ನು ನೋಡಿಕೊಂಡು ಸ್ಥಳೀಯ ಸಮಿತಿಯ ತೀರ್ಮಾನದಂತೆ, ಸ್ಥಳೀಯವಾಗಿ ಯಾವ ಬೆಳೆಗಳನ್ನು ಹಾಕಬೇಕು ಎಂಬ ಬಗ್ಗೆ ರೈತರಿಗೆ ಸಕಾಲದಲ್ಲಿ ಸೂಚನೆಗಳನ್ನು ನೀಡಬೇಕು. ಕರ್ನಾಟಕದಲ್ಲಿ ಬರಪರಿಸ್ಥಿತಿ ಬಗ್ಗೆ ಮುಂದಿನ 15ದಿನಗಳ ಒಳಗಾಗಿ ಕೇಂದ್ರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಬೇಕಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ವಾರದ ಒಳಗಾಗಿ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಇದಕ್ಕಾಗಿ ಜಿಲ್ಲೆಗಳಲ್ಲಿರುವ ಎಲ್ಲಾ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು. ಬರಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ತಾಲ್ಲೂಕು, ಹೋಬಳಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು.
ಯಾವುದೇ ಹೊಸ ಬೋರ್‌ವೆಲ್‌ಗಳನ್ನು ಕೊರೆಯುವುದಿದ್ದರೂ ಸರಿಯಾಗಿ ಪರಿಶೀಲನೆ ನಡೆಸಬೇಕು. ಬೋಗಸ್ ಬೋರ್ವೆಲ್ ದಾಖಲೆಗಳನ್ನು ಸೃಷ್ಟಿಸಿದರೆ ಜಿಲ್ಲಾಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಟ್ರಾನ್ಸ್ ಫಾರ್ಮರ್ ಗಳ ದುರಸ್ತಿಗೆ 4ಜಿ ವಿನಾಯಿತಿಯನ್ನು ಈಗಾಗಲೇ ನೀಡಲಾಗಿದೆ.


Click it and Unblock the Notifications
