Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಎಲ್ಲೆಲ್ಲಿ ಭಾರಿ ಮಳೆ?
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 25) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವೂ ಎಚ್ಚರಿಕೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇತ್ತ ಬೆಂಗಳೂರು ನಗರ, ತುಮಕೂರು, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಕಲಬುರಗಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಸಾಧ್ಯತೆಯಿದೆ.
ಇನ್ನು, ಆಗಸ್ಟ್ 26ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಸಾಧ್ಯತೆಯಿದೆ.
ಇನ್ನು ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲೂ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರಿ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ನಿನ್ನೆ ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?
*ನೀಲಕುಂದ, ಉತ್ತರ ಕನ್ನಡ - 9 ಸೆಂ.ಮೀ
*ಹುಮನಾಬಾದ್, ಬೀದರ್ - 8 ಸೆಂ.ಮೀ
*ಶ್ರೀಮಂಗಲ, ಕೊಡಗು - 8 ಸೆಂ.ಮೀ
*ಅಗುಂಬೆ, ಶಿವಮೊಗ್ಗ - 7 ಸೆಂ.ಮೀ
*ಧರ್ಮಸ್ಥಳ, ದಕ್ಷಿಣ ಕನ್ನಡ - 7 ಸೆಂ.ಮೀ
*ಸಂತಹಳ್ಳಿ, ಕೊಡಗು - 7 ಸೆಂ.ಮೀ


Click it and Unblock the Notifications
