Karnataka Rain: ನಿಮ್ಮೂರಲ್ಲಿ ಮುಂದಿನ 3 ದಿನ ಮಳೆ ಇರುತ್ತಾ? ಇಲ್ಲಿದೆ ಹವಾಮಾನ ಇಲಾಖೆಯ ಪಕ್ಕಾ ವರದಿ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಬ್ಬರಿಸುತ್ತಿದ್ದ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಸದ್ಯ ಕೊಂಚ ಕ್ಷೀಣಿಸಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಸದ್ಯ ಮುಂಗಾರು ಮಾರುತಗಳು ದುರ್ಬಲಗೊಂಡಿವೆ. ಇದರ ಪ್ರಭಾವದಿಂದಾಗಿ ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದರೆ, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ದಾಖಲಾಗಿದೆ. ಆದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮುಂಗಾರು ತೀರಾ ಕ್ಷೀಣಿಸಿದ್ದು, ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕ್ಷೀಣಿಸಿದ್ದ ಮುಂಗಾರು ಮಾರುತಗಳು ಮತ್ತೆ ಚೇತರಿಸಿಕೊಳ್ಳುತ್ತಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದ್ದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಗಾಳಿ-ಮಳೆಯ ಆರ್ಭಟ ಮುಂದುವರಿಯಲಿದೆ.

ಯಾವ ಜಿಲ್ಲೆಗಳಲ್ಲಿ ಮಳೆ?
ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಸಾಗುವ ನಿರಂತರ ಬಲವಾದ ಗಾಳಿ ಬೀಸಲಿದ್ದು, ಸಮುದ್ರ ತೀರದ ನಿವಾಸಿಗಳು ಹಾಗೂ ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆ ಸುರಿಯಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ವರುಣನ ಸಿಂಚನವಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲೂ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಸಾಗುವ ನಿರಂತರ ತಂಗಾಳಿ ಇರಲಿದ್ದು, ವಾತಾವರಣ ತಂಪಾಗಿರಲಿದೆ.
ಮುಂಗಾರು ಚಲನೆ ಹೇಗಿದೆ?
ದೇಶದ ಇತರ ಭಾಗಗಳಿಗೆ ಮುಂಗಾರು ವಿಸ್ತರಣೆಯಾಗಲು ವಾತಾವರಣ ಪೂರಕವಾಗಿದೆ. ಮುಂದಿನ 3 ದಿನಗಳಲ್ಲಿ ಉತ್ತರ ಅರೇಬಿಯನ್ ಸಮುದ್ರ, ಗುಜರಾತ್, ಮಧ್ಯಪ್ರದೇಶದ ಕೆಲವು ಭಾಗಗಳು ಹಾಗೂ ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಬಿಹಾರದ ಉಳಿದ ಭಾಗಗಳಿಗೆ ಮುಂಗಾರು ತೀವ್ರವಾಗಿ ವ್ಯಾಪಿಸಲಿದೆ. ಇದರೊಂದಿಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಿಗೂ ಮುಂಗಾರು ಮಾರುತಗಳು ಪ್ರವೇಶಿಸಲಿವೆ. ಆ ನಂತರದ ದಿನಗಳಲ್ಲಿ ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಆಗ್ನೇಯ ರಾಜಸ್ಥಾನದಲ್ಲೂ ಮಳೆ ಮಾರುತಗಳು ಆವರಿಸಿಕೊಳ್ಳಲಿವೆ.












Click it and Unblock the Notifications