Karnataka Rain: ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ. ಇನ್ನು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಹಳದಿ ಎಚ್ಚರಿಕೆ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹೇಳಿದೆ.

40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಪ್ರವಾಸಿಗರು, ಸ್ಥಳೀಯರು ಕೂಡ ಸಮುದ್ರದ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಬುಧವಾರ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ, ಕಾರ್ಕಳ, ಅಂಕೋಲಾ, ಗೇರುಸೊಪ್ಪ, ಗೋಕರ್ಣ, ಪಣಂಬೂರು, ಮಂಗಳೂರು, ಮುಲ್ಕಿ, ಪುತ್ತೂರು, ಸುಬ್ರಹ್ಮಣ್ಯ, ಧರ್ಮಸ್ಥಳ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಲಿಂಗನಮಕ್ಕಿ, ಶೃಂಗೇರಿ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಮಲೆನಾಡು ಭಾಗದಲ್ಲಿ ಭಾರಿ ಮಳೆ
ಇನ್ನು ರಾಜ್ಯದ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಲು ಶುರು ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಶಿರಸಿ, ಸಕಲೇಶಪುರದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮುಂದಿನ 5 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ಮುಂದಿನ ಐದು ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮಳೆಯ ಪ್ರಮಾಣ ತೀವ್ರ ಕಡಿಮೆಯಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು ಕೆರೆ, ಕಟ್ಟೆ, ಜಲಾಶಗಳು ಕೂಡ ಬರಿದಾಗಿದ್ದು ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ.
ಉತ್ತರ ಒಳನಾಡಿನಲ್ಲಿ ಬರದ ಛಾಯೆ
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ.












Click it and Unblock the Notifications