Karnataka Rain: ಹಲವು ಜಿಲ್ಲೆಗಳಲ್ಲಿ ಚಳಿ: ಈ ಜಿಲ್ಲೆಗಳಿಗೆ ಭಾರಿ ಮಳೆ!
ಮಿಚಾಂಗ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಬೀರಿದ್ದು, ಹಲವು ಜಿಲ್ಲೆಗಳಲ್ಲಿ ವಾತಾವರಣ ಫುಲ್ ಕೂಲ್ ಕೂಲ್ ಆಗಿದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಭಾನುವಾರದಿಂದಲೇ ಮೋಡ ಕವಿದ ವಾತಾವರಣ ಇದ್ದು, ಚದುರಿದಂತೆ ತುಂತುರು ಮಳೆಯಾಗಿದೆ. ಸೋಮವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ತಂಪಾಗಿದೆ.
ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ
ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಕುಮಟಾ, ಹೊನ್ನಾವರ, ಕಾರವಾರ, ಬೈಂದೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಉಳಿದಂತೆ ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾವೇರಿ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಮಿಚಾಂಗ್ ಚಂಡಮಾರುತದ ಪ್ರಭಾವ
ಮಿಚಾಂಗ್ ಚಂಡಮಾರುತದ ಪರಿಣಾಮ ಇನ್ನೂ ಎರಡು ದಿನ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಅದರ ಪರಿಣಾಮ ಬೆಂಗಳೂರಿನಲ್ಲಿ ಕೂಡ ಕಾಣಿಸುತ್ತಿದೆ. ಮೋಡ ಕವಿದ ವಾತಾವರಣ ಜೊತೆ ಚಳಿ ಹೆಚ್ಚಾಗಿದೆ. ಇನ್ನೂ ಎರಡು ದಿನ ನಗರದಲ್ಲಿ ಇದೇ ಪರಿಸ್ಥಿತಿ ಇರಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಚೆನ್ನೈನಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು ಇನ್ನೂ ಎರಡು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಮಿಚಾಂಗ್ ಚಂಡಮಾರುತ ಚೆನ್ನೈಗೆ ಅಪ್ಪಳಿಸಲಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಮತ್ತು ಖಾಸಗಿ ನೌಕರರಿಗೆ ಮನೆಯಲ್ಲೇ ಕೆಲಸ ಮಾಡಲು ಕೇಳುವಂತೆ ಸರ್ಕಾರ ಸೂಚನೆ ನೀಡಿದೆ.
ಚೆನ್ನೈ ಮಾತ್ರವಲ್ಲದೆ ಪಾಂಡಿಚೆರಿ, ಆಂಧ್ರ ಪ್ರದೇಶ ಮತ್ತು ಒರಿಸ್ಸಾ ಕರಾವಳಿ ಪ್ರದೇಶಗಳಲ್ಲಿ ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications