Karnataka Rain: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ
ಸೋಮವಾರ ಮಧ್ಯಾಹ್ನವೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿವಿಧ ಕಡೆ ಗುಡುಗು ಮಿಂಚು ಸಹಿತ ಮಳೆ ಸುರಿಯುತ್ತಿದೆ. ಸೋಮವಾರ ರಾತ್ರಿ ಕೂಡ ರಾಜ್ಯದ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು, ಬಿರುಗಾಳಿ ಸಹಿತ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಮಧ್ಯಾಹ್ನ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಸಂಜೆ ಕೂಡ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಾಜಿನಗರ, ಲಗ್ಗೆರೆ, ಯಶವಂತಪುರ, ವಿಜಯನಗರ, ಗೊರಗುಂಟೆ ಪಾಳ್ಯ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹದೇವಪುರದ ಕಾಡುಗೋಡಿಯಲ್ಲಿ 27.5 ಮಿಮೀ ಮಳೆಯಾಗಿದೆ. ಹಾವೇರಿ ಜಿಲ್ಲೆಯ ಸವಣೂರಿನ ಹುರುಳಿಕುಪ್ಪಿಯಲ್ಲಿ ಕಳೆದ 24 ಗಂಟೆಯಲ್ಲಿ 60 ಮಿಮೀ ಮಳೆಯಾಗಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು-ಮಿಂಚು ಆರ್ಭಟ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಲೆನಾಡು ಜಿಲ್ಲೆಗಳಲ್ಲಿ ಕೂಡ ಇನ್ನೂ 5 ದಿನಗಳ ಕಾಲ ಗುಡುಗು ಮಿಂಚು, ಬಿರುಗಾಳಿ ಸಹಿತ ಉತ್ತಮ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಕೂಡ ಬಿಡುಗಾಳಿ, ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಬೀದರ್, ಬಳ್ಳಾರಿ, ವಿಜಯನಗರ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.












Click it and Unblock the Notifications