Karnataka Rain: ರಾಜ್ಯದಲ್ಲಿ ಮುಂಗಾರು ಚುರುಕು: ಮುಂದಿನ 48 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಬಿಪರ್‌ಜಾಯ್ ಚಂಡಮಾರುತದ ಕಾರಣ ದುರ್ಬಲಗೊಂಡಿದ್ದ ಮುಂಗಾರು ಸೋಮವಾರದಿಂದ ಚುರುಕಾಗುವ ಸಾಧ್ಯತೆ ಇದ್ದು, ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾನುವಾರ ಬೆಳಗ್ಗೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದರೆ, ಸಂಜೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಇದರಿಂದ ಬರದ ಭೀತಿಯಲ್ಲಿದ್ದ ರಾಜ್ಯಕ್ಕೆ ಸ್ವಲ್ಪ ಸಮಧಾನ ಸಿಕ್ಕಂತಾಗಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದ್ದು ಮುಂದಿನ ನಾಲ್ಕೈದು ದಿನಗಳ ಕಾಲ, ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಿರಲಿದೆ ಎಂದು ಹೇಳಿದೆ.
ಮೀನುಗಾರರಿಗೆ ಎಚ್ಚರಿಕೆ
ಬಿಪರ್ ಜಾಯ್ ಚಂಡಮಾರುತದ ಕಾರಣ ಭಾರಿ ಅಲೆಗಳು ಉಂಟಾಗುವ ಸಾಧ್ಯತೆ ಇದ್ದುದ್ದರಿಂದ ಜೂನ್ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿತ್ತು, ಈಗ ಮಾನ್ಸೂನ್ ತೀವ್ರವಾಗಲ್ಲಿ ಗಂಟೆಗೆ 55 ಕಿಲೋ ಮೀಟರ್ ವೇಗದವರೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಸ್ಥಳೀಯರು, ಪ್ರವಾಸಿಗರಿಗೂ ಕೂಡ ಸಮುದ್ರದ ತೀರದಲ್ಲಿ ಓಡಾಡುವುದು, ಆಟವಾಡುವುದನ್ನು ನಿಷೇಧಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ
ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಗುಡುಗು ಮಿಂಚಿನ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯನ್ನು ನಿರೀಕ್ಷೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ.
ರಾಜ್ಯದಲ್ಲಿ ಮಳೆ ಕೊರತೆ
ಜೂನ್ ಮೊದಲನೇ ವಾರವೇ ರಾಜ್ಯಕ್ಕೆ ಮುಂಗಾರು ಆರಂಭವಾಗಬೇಕಿತ್ತು, ಆದರೆ ಬಿಪರ್ ಜಾಯ್ ಚಂಡಮಾರುತದ ಕಾರಣ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬಿತ್ತನೆಗಾಗಿ ಬೀಜ, ರಸಗೊಬ್ಬರವನ್ನು ಹೊಂದಿಸಿಕೊಂಡಿರುವ ರೈತರು ಈಗ ಆಗಸವನ್ನು ನೋಡುವಂತಾಗಿದೆ. ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರು ಕನಿಷ್ಠ ಮಟ್ಟಕ್ಕೆ ತಲುಪಿದೆ. ಹಲವು ನದಿ, ಹೊಳೆಗಳು ಸಂಪೂರ್ಣ ಖಾಲಿಯಾಗಿ ರಸ್ತೆಗಳಂತಾಗಿವೆ.
ಸದ್ಯ ಬಿಪರ್ ಜಾಯ್ ಚಂಡಮಾರುತದ ಪ್ರಮಾಣ ತಗ್ಗಿದ್ದು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನೂ ಶೇಕಡಾ 10 ರಷ್ಟು ಕೂಡ ಮುಂಗಾರು ಬಿತ್ತನೆ ಆಗಿಲ್ಲ, ಮಳೆ ಬಿರುಸಾದರೆ ಕೃಷಿ ಚಟುವಟಿಕೆಗಳು ಕೂಡ ಗರಿಗೆದರಲಿವೆ. ಭಾನುವಾರದಿಂದ ಮೋಡ ಕವಿದ ವಾತಾವರಣ ಇದ್ದು, ಸೋಮವಾರ ಬೆಳಗ್ಗೆ ಕೂಡ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ.












Click it and Unblock the Notifications