Karnataka rain: ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಮಳೆ: IMD ಮುನ್ಸೂಚನೆ
ಕರ್ನಾಟಕ, ಸೆಪ್ಟೆಂಬರ್, 23: ಮಳೆ ಕೊರತೆ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಬರದ ಛಾಯೆ ಆವರಿಸಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಮಳೆರಾಯ ಅಬ್ಬರಿಸುತ್ತಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ 8 ದಿನಗಳ ಕಾಳ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾದರೆ ಯಾವ್ಯಾವ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಹಾಗೆಯೇ ಬೀದರ್, ವಿಜಯಪುರ, ಕಲಬುರಗಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಾವಣಗೆರೆಯ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ 8 ದಿನಗಳ ಕಾಲ ಮಳೆ
ಇನ್ನು ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ 8 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಆದರೂ ಕರ್ನಾಟಕವು ಚೇತರಿಸಿಕೊಳ್ಳಲು ಈ ಅಂತಿಮ ಹಂತದ ನೈರುತ್ಯ ಮಾನ್ಸೂನ್ ಸಾಕಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಕಾವೇರಿ ಜಲಾನಯನ ಪ್ರದೇಶಕ್ಕೆ ಸಾಮಾನ್ಯ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಮತ್ತು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ ಎಂದು ಐಎಂಡಿ ವಿಜ್ಞಾನಿ ಎ.ಪ್ರಸಾದ್ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್‌ನ ಕೊನೆಯ 8 ದಿನಗಳಲ್ಲಿ ಮಳೆ ಸುರಿದರೆ, ಇದು ಮಳೆ ಕೊರತೆಯ ಅಂತರವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಮತ್ತೊಬ್ಬ IMD ಅಧಿಕಾರಿ ಹೇಳಿದ್ದಾರೆ.
ಭಾರೀ ಮಳೆಯಾದರೆ ಮಾತ್ರ ರಾಜ್ಯದಲ್ಲುನ ಬರದ ಪರಿಸ್ಥಿತಿಯನ್ನು ಸುಧಾರಿಸಬಹುದು. ಇಲ್ಲದಿದ್ದರೆ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್‌ನಲ್ಲಿಯೂ ನೀರಿನ ಕೊರತೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications