Karnataka rain: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಎಲ್ಲಿಲ್ಲಿ?, ಇಲ್ಲಿದೆ ಮಾಹಿತಿ
ಕರ್ನಾಟಕ, ಸೆಪ್ಟೆಂಬರ್, 18: ರಾಜ್ಯದಲ್ಲಿ ಈ ಬಾರಿ ಮಳೆರಾಯನ ಆರ್ಭಟ ಅಷ್ಟಕಷ್ಟೇ. ಜುಲೈ ತಿಂಗಳಿನಲ್ಲಿ ಅಬ್ಬರಿಸಿದ ಮಳೆರಾಯ ಆಗಸ್ಟ್ ತಿಂಗಳಿನಲ್ಲಿ ಕೈಕೊಟ್ಟು, ಮತ್ತೆ ಇದೀಗ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಆರ್ಭಟ ಶುರು ಮಾಡಿದ್ದಾನೆ. ಇನ್ನು ಕೆಲವೆಡೆ ಕಳೆದ ಒಂದು ವಾರದಿಂದ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದ ಹಲವೆಡೆ ಮಳೆರಾಯ ತಂಪೆರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಣನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ. ಈ ಹಿನ್ನೆಲೆ ಇಂದು ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯ ಆತಂಕ ಎದುರಾಗಿದೆ.
ಇಂದು (ಸೆಪ್ಟೆಂಬರ್ 18) ದೇಶದಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇಂದು ಹಬ್ಬಕ್ಕೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದಲೇ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ವೇಳೆ ವರುಣ ಅಬ್ಬರಿಸಿ ಬೊಬ್ಬರೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಮಳೆರಾಯ ಅಬ್ಬರಿಸಿದ್ದಾನೆ. ಇಂದು ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದಯವರೆಯಲಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ. ಬಳ್ಳಾರಿ, ಬೆಂಗಳೂರು, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.












Click it and Unblock the Notifications