Karnataka Rain: ಮುಂದಿನ ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಸೆಪ್ಟೆಂಬರ್ ಕೊನೆಯ ವಾರದಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಚುರುಕುಗೊಂಡಿದೆ. ಸೆಪ್ಟೆಂಬರ್ 27ರಿಂದ ಅಕ್ಟೋಬರ್ 5ರ ವರೆಗೆ ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 28 ರಿಂದ 30 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಭಾರಿ ಅಲೆಗಳು ಏಳುವ ಕಾರಣ ಎಚ್ಚರಿಕೆಯಿಂದ ಇರುವಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 5 ರವರೆಗೆ ಕೂಡ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಮುಂದಿನ ಒಂದು ವಾರಗಳ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಯಾವ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಒಂದು ವಾರ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.
ರಾಯಚೂರು, ಕೊಪ್ಪಳ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೊಡಗು, ಗದಗ, ಬೀದರ್, ವಿಜಯಪುರ, ಹಾಸನ, ಕಲಬುರಗಿ, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯನಗರ, ಚಿತ್ರದುರ್ಗ, ಹಾವೇರಿ, ಮಂಡ್ಯ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾದರೆ ಸಂಕಷ್ಟ ಸ್ವಲ್ಪ ಕಡಿಮೆಯಾಗಲಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಿಗೆ ಸಮಸ್ಯೆ ಉಂಟಾಗಿದೆ. ಮುಂಗಾರು ಅನಿಶ್ಚಿತತೆಯ ಕಾರಣ ರೈತರು ಈಗಾಗಲೇ ಬೆಳೆ ನಷ್ಟ ಅನುಭವಿಸಿದ್ದು, ಕುಡಿಯಲು ಮತ್ತು ಜಾನುವಾರುಗಳಿಗೆ ನೀರು ಬೇಕು ಎಂದರೂ ಈಗ ಉತ್ತಮ ಮಳೆಯಾಗಬೇಕು ಎನ್ನುವ ಸ್ಥಿತಿ ಇದೆ. ಇಲ್ಲದಿದ್ದರೆ ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ.
ಒಂದು ತಿಂಗಳು ಉತ್ತಮ ಮಳೆ
ಮುಂದಿನ ಒಂದು ತಿಂಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಅತ್ಯುತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ ಮಧ್ಯದಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಅಕ್ಟೋಬರ್ ತಿಂಗಳ ಮೊದಲ ಎರಡು ವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications