Karnataka Rain: ಆಗಸ್ಟ್ 14ರವರೆಗೆ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ
ಜುಲೈ ತಿಂಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಆಗಸ್ಟ್ ತಿಂಗಳ ಮೊದಲ ವಾರ ತಣ್ಣಗಾಗಿದೆ. ಆಗಸ್ಟ್‌ನಲ್ಲಿ ಮಳೆ ಕೊರತೆಯಾಗುತ್ತದೆ ಎಂದು ಆತಂಕವಾಗುತ್ತಿರುವ ಸಂದರ್ಭದಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 14ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಹವಾಮಾನ ಇಲಾಖೆ ಪ್ರಕಾರ ಮುಂದಿನ ಒಂದು ವಾರಗಳ ಕಾಲ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಕಲಬುರಗಿ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಗದಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಪ್ರಮಾಣ ಕಡಿಮೆಯಾಗಿದ್ದು ನದಿಗಳ ಅಬ್ಬರ ಕಡಿಮೆಯಾಗಿದೆ. ರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗುತ್ತಿದೆ.
ಯಾದಗಿರಿ, ಚಿತ್ರದುರ್ಗ, ಚಾಮರಾಜನಗರ, ರಾಯಚೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಮಂಡ್ಯ, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಪ್ರದೇಶಗಳಲ್ಲಿ ಮಳೆ
ಆಗಸ್ಟ್ 8ರಂದು ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸೂರತ್ಕಲ್‌ನಲ್ಲಿ 36 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಇದನ್ನು ಹೊರತುಪಡಿಸಿ ಮಳವೂರು, ಕಿನ್ನಿಗೋಳಿ, ಬಾಲ, ಕೆಮ್ರಾಳ, ಗುರುಪುರ, ಕೃಷ್ಣಾಪುರ ಸರ್ಕಾರ ಶಾಲೆ, ಬೆಳ್ಳಾರೆ, ಯೆಕ್ಕಾರು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.
ಉಡುಪಿ ಜಿಲ್ಲೆಯ ಕೇಡೂರ, ಕೊಕ್ಕರ್ಣೆ, ಹಾಕ್ಲಾಡಿ, ಅಂಬಾಲಪಾಡಿ, ಬಿಲ್ಲಾಡಿ, ಹಳ್ಳಿಹೊಳೆ, ಕೋಡಿಬೆಟ್ಟು, ಶಿರೂರು, ಕೋಲಾರ ಜಿಲ್ಲೆಯ ಬನಹಳ್ಳಿ, ಕವಲಗಿರಿಯನಹಳ್ಳಿ, ಕುಡಿಯನ್ನೂರು, ಹುಲಿಬೆಲೆ, ಶಿವರಪಟ್ಟಣ, ಹುಲದೇನಹಳ್ಳಿ, ಅರಲೇರಿ, ಚೊಕ್ಕಂಡಹಳ್ಳಿಯಲ್ಲಿ ಉತ್ತಮ ಮಳೆಯಾಗಿದೆ. ಇದನ್ನು ಹೊರತು ಪಡಿಸಿ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಕೂಡ ಉತ್ತಮ ಮಳೆಯಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾರವಣ ಇದ್ದು, ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿದೆ. ಸಂಜೆ ವೇಳೆಗೆ ನಗರದ ಹಲವು ಕಡೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications