Karnataka Rain:ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ:ಉತ್ತರ ಕರ್ನಾಟಕ, ಮಲೆನಾಡು ಹವಾಮಾನ ಹೀಗಿರಲಿದೆ
ರಾಜ್ಯಕ್ಕೆ ಮುಂಗಾರು ಆಗಮಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಸದ್ಯ ಆತಂಕಕ್ಕೆ ಕಾರಣವಾಗಿದೆ. ಮುಂದಿನ ಎರಡು ದಿನಗಳ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯಾದ್ಯಂತ ಅಲ್ಲಿಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಕಳೆದ 24 ಗಂಟೆಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹದೇವಪುರ ವಲಯದ ರಾಮಮೂರ್ತಿ ನಗರದಲ್ಲಿ 10 ಮಿಮೀ ಮಳೆಯಾಗಿದೆ. ರಾಜ್ಯದಲ್ಲಿ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ 71.5 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲಿ 24 ಗಂಟೆಗಳಲ್ಲಿ ಅತಿ ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಕಳೆದ 4 ಗಂಟೆಗಳಲ್ಲಿ ತುಮಕೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾದ ವರದಿಯಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆ
ದಕ್ಷಿಣ ಒಳನಾಡು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯನಗರ, ವಿಜಯಪುರ, ಬೆಳಗಾವಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮಳೆ ಮುನ್ಸೂಚನೆ
ಇನ್ನು ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಹದೇವಪುರ, ಬೊಮ್ಮನಹಳ್ಳಿ ಮತ್ತು ರಾಜ ರಾಜೇಶ್ವರಿ ನಗರ ವಲಯದಲ್ಲಿ ಸಾಧಾರಣ ಮಳೆ ಬೀಳಬಹುದು ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications