Karnataka Weather: ಈ 16 ಜಿಲ್ಲೆಗಳಲ್ಲಿ ಭಾರಿ ಮಳೆ: ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ
ವಾರಾಂತ್ಯದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದ್ದು ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 22 ಮತ್ತು 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.
55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರ ಪ್ರಕ್ಷುಬ್ದಗೊಳ್ಳುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಭಾರಿ ಅಲೆಗಳು ತೀರಕ್ಕೆ ಅಪ್ಪಳಿಸುವ ಕಾರಣ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಕೂಡ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. 30 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಒಳಬರುತ್ತಿದ್ದು, ಜಲಾಶಯದಿಂದ 6 ಗೇಟ್ ಮೂಲಕ 30 ಸಾವಿರ ಕ್ಯೂಸೆಕ್ ನೀರನ್ನು ಕಾಳಿ ನದಿಗೆ ಹರಿಬಿಡಲಾಗಿದೆ. ಭಾರಿ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಕಾರಣ ಕಾಳಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಜುಲೈ 21ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 163 ಮಿಮೀ ಮಳೆಯಾಗಿದ್ದು ಅತಿ ಹೆಚ್ಚು ಮಳೆ ಬಿದ್ದ ಪ್ರದೇಶ ಎನಿಸಿಕೊಂಡಿದೆ. ಉಡುಪಿ, ಚಿಕ್ಕಮಗಳೂರು, ಯಾದಗಿರಿ, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
Orange alert to coastal Karnataka pic.twitter.com/UEKwEYnyaj
— Karnataka State Natural Disaster Monitoring Centre (@KarnatakaSNDMC) July 22, 2023
ಈ 16 ಜಿಲ್ಲೆಗಳಲ್ಲಿ ಉತ್ತಮ ಮಳೆ
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗದಗ ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಕೊಪ್ಪಳ, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜುಲೈ 24ರಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್
ಜುಲೈ 24ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. 115.6 ಮಿಮೀ ನಿಂದ 204.4 ಮಿಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ವರದಿಯಲ್ಲಿ ತಿಳಿಸಿದೆ. ಮಳೆ ಕೊರತೆಯಿಂದ ಕಂಗೆಟ್ಟಿರುವ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇನ್ನಾದರೂ ಮಳೆ ಕರುಣೆ ತೋರಿಸುತ್ತಾ ಎಂದು ರೈತರು ಕಾಯುತ್ತಿದ್ದಾರೆ.












Click it and Unblock the Notifications