Rain Alert: ಇಂದು ಕರ್ನಾಟಕದ ಬಹುತೇಕ ಕಡೆ ಮಳೆರಾಯನ ಆಗಮನ: ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?
ಬೆಂಗಳೂರು, ಏಪ್ರಿಲ್ 08: ಮಳೆಗಾಗಿ ಕಾಯುತ್ತಿರುವ ರಾಜ್ಯದ ಜನತೆಗೆ ಕೊನೆಗೂ ನೆಮ್ಮದಿಯ ಸುದ್ದಿಯನ್ನ ಹವಾಮಾನ ಇಲಾಖೆ ನೀಡಿದೆ. ಕಳೆದ ವರ್ಷ ಮಳೆ ಇಲ್ಲದೆ ರೋಸಿ ಹೋಗಿದ್ದ ರೈತರಿಗೆ ಯುಗಾದಿ ಹಬ್ಬದ ಬಳಿಕ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೌದು, ಕರ್ನಾಟಕದಾದ್ಯಂತ ಬಿಸಿಲು ತೀವ್ರವಾಗಿದೆ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲಿನ ತಾಪಮಾನಕ್ಕೆ ಬೆಂದು ಹೋಗಿದ್ದ ರಾಜ್ಯದ ಜನತೆ ವರುಣಾನ ಆಗಮಕ್ಕೆ ಕಾದುಕುಳಿತಿದ್ದು, ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಇನ್ನೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಕೊಡಗು ಜಿಲ್ಲೆಯಲ್ಲಿ ಭಾನುವಾರ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕಾದಿದ್ದ ಭೂಮಿ ತಂಪಾಗಿದೆ. ಇತ್ತ ಬೆಂಗೂರಿನಲ್ಲಿ 10 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ 10ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 12 ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಏಪ್ರಿಲ್ 9ಕ್ಕೆ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ & ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಇನ್ನೂ ಕರ್ನಾಟಕ ರಾಜ್ಯವೂ ಸೇರಿದಂತೆ ಮುಂದಿನ ಕೆಲವು ದಿನಗಳಲ್ಲಿ 9 ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಒಡಿಶಾ, ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ ಮತ್ತು ಮರಾಠವಾಡದ ಪ್ರದೇಶಗಳಲ್ಲೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಪ್ರಿಲ್ 9 ರಿಂದ 12 ರ ನಡುವೆ, ಕೇರಳ, ಆಂಧ್ರ ಪ್ರದೇಶದ ಕರಾವಳಿ, ತೆಲಂಗಾಣ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 10 ರವರೆಗೆ ಜಾರ್ಖಂಡ್‌ನಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ. ಏಪ್ರಿಲ್ 12 ರವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಹಾರಾಷ್ಟ್ರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.












Click it and Unblock the Notifications