Karnataka Weather: ಈ ಜಿಲ್ಲೆಗಳಿಗೆ ಇನ್ನೂ ಎರಡು ದಿನ ರೆಡ್ ಅಲರ್ಟ್: ಎಲ್ಲೆಲ್ಲಿ ಭಾರಿ ಮಳೆ ತಿಳಿಯಿರಿ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ವ್ಯಾಪಕ ಮಳೆಯಾಗಲಿದ್ದು ರೆಡ್ ಅಲರ್ಟ್ ನೀಡಲಾಗಿದೆ. ಉತ್ತರ ಆಂಧ್ರಪ್ರದೇಶ ಮತ್ತು ಪಕ್ಕದ ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಮುಂಗಾರು ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆದ್ದರಿಂದ ಮುಂದಿನ 3-4 ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದ್ದು, ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಮುಂದಿನ 3-4 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡು ಮತ್ತು ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳು ಜುಲೈ 26-28 ರ ಅವಧಿಯಲ್ಲಿ ಪ್ರವಾಹದ ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜಾಗಬೇಕು ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಗಾರು ಪರಿಸ್ಥಿತಿಯಿಂದಾಗಿ ರಾಜ್ಯದ ಅಣೆಕಟ್ಟು/ಜಲಾಶಯಗಳಿಗೆ ಒಳಹರಿವು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕೂಡ ಉತ್ತಮ ಮಳೆಯಾಗುತ್ತಿದ್ದು ಕೆಆರ್ ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಸಮುದ್ರದಲ್ಲಿ ಭಾರಿ ಅಲೆಗಳು ಏಳಲಿವೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಯೋಜಿಸದಂತೆ ಪ್ರವಾಸಿಗರಿಗೆ ಮನವಿ ಮಾಡಲಾಗಿದೆ.
ಈ 28 ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ದಾರವಾಢ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯಪುರ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಆರ್ ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಸದ್ಯ ಜಲಾಶಯದ ಮಟ್ಟ 100 ಅಡಿ ಸಮೀಪಕ್ಕೆ ಬಂದಿದೆ. ಕಬಿನಿ, ಕದ್ರಾ ಜಲಾಶಯದಿಂದ ನೀರು ಹೊರಬಿಡಲಾಗಿದೆ. ಎಚ್ಚರಿಕೆಯಿಂದ ಇರುವಂತೆ ನದಿ ಪಾತ್ರದ ಜನಗಳಿಗೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications