Karnataka Weather: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್: ಈ 21 ಜಿಲ್ಲೆಗಳಲ್ಲಿ ಭಾರಿ ಮಳೆ
ಕರ್ನಾಟಕ ರಾಜ್ಯಾದ್ಯಂತೆ ಮಳೆ ಚುರುಕುಗೊಂಡಿದ್ದು ಹಲವು ಕಡೆಗಳಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಅದರಲ್ಲೂ ಕರವಾಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಜುಲೈ 24 ಮತ್ತು 25ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ.
ಮಲೆನಾಡು ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಾವೇರಿ ಕಣಿವೆ ಪ್ರದೇಶದಲ್ಲಿ ಕೂಡ ಉತ್ತಮ ಮಳೆಯಾಗುತ್ತಿದ್ದು ರಾಜ್ಯದ ಎಲ್ಲಾ ನದಿಗಳಲ್ಲು ನೀರಿನ ಹರಿವು ಹೆಚ್ಚಳವಾಗಿದೆ. ಜಲಾಶಯಗಳಿಗೆ ಭಾರಿ ನೀರು ಹರಿದುಬರುತ್ತಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈಗಾಗಲೇ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಜುಲೈ 23ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಡಕಣಿಯಲ್ಲಿ 342 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರೆಯಲಿದೆ. 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರದಲ್ಲಿ ಭಾರಿ ಅಲೆಗಳು ಉಂಟಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ಸೂಚನೆ ನೀಡಲಾಗಿದೆ. ಸಮುದ್ರ ತೀರಕ್ಕೆ ತೆರಳದಂತೆ ಸ್ಥಳೀಯರು, ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.
ಈ 21 ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ವಿಜಯಪುರ, ಬಳ್ಳಾರಿ, ವಿಜಯಗರ, ಕೊಪ್ಪಳ, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನದಿಗಳಲ್ಲಿ ಹೆಚ್ಚಿದ ಒಳಹರಿವು
ಭಾರಿ ಮಳೆಯಾಗುತ್ತಿರುವ ಕಾರಣ ರಾಜ್ಯದ ನದಿಗಳು ಮೈದುಂಬಿಕೊಂಡಿದ್ದು, ಜಲಾಶಯಗಳಿಗೆ ಒಳಹರಿವಿನಿ ಪ್ರಮಾಣ ಹೆಚ್ಚಾಗಿದೆ. ಕೆಆರ್ ಆಸ್ ಜಲಾಶಯಕ್ಕೆ ಕೂಡ ಒಳಹರಿವು ಹೆಚ್ಚಳವಾಗಿದ್ದು ಈ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ.
ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications