Karnataka Rain Alert: ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಶನಿವಾರ ಮತ್ತು ಭಾನುವಾರ ಕೂಡ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಮಲೆನಾಡು ಭಾಗದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆಯಾಗುತ್ತಿರುವ ಕಾರಣ ಈ ಜಿಲ್ಲೆಗಳ ನದಿಗಳು ತುಂಬಿ ಹರಿಯುತ್ತಿದ್ದು, ಹಲವು ಕಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಠಿಯಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಜೊತೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಎಚ್ಚರಿಕೆಯಿಂದ ಇರುವಂತೆ ಸ್ಥಳೀಯರಿಗೆ ಸೂಚನೆ ನೀಡಲಾಗಿದೆ. ಭಾರಿ ಮಳೆಯಾಗುತ್ತಿರುವ ಕಾರಣ ಹಲವು ಕಡೆಗಳಲ್ಲಿ ಗುಡ್ಡ ಕುಸಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರ ಧಾರಾಕಾರ ಮಳೆಯಿಂದಾಗಿ ಚಲಿಸುತ್ತಿದ್ದ ಬೈಕ್ ಮೇಲೆ ಆಲದ ಮರ ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಹಲವು ದೇವಸ್ಥಾನಗಳು ಜಲಾವೃತ
ಭಾರಿ ಮಳೆಯಾಗುತ್ತಿರುವ ಕಾರಣ ಕರಾವಳಿ ಭಾಗದಲ್ಲಿ ಹಲವು ದೇವಸ್ಥಾನಗಳು ಜಲಾವೃತಗೊಂಡಿವೆ. ಮಧುವಾಹಿನಿ ನದಿ ಉಕ್ಕಿ ಹರಿಯುತ್ತಿರುವ ಕಾರಣ ಕಾಸರಗೋಡು ಸಮೀಪದ ಮಧೂರು ಕ್ಷೇತ್ರಕ್ಕೆ ಜಲದಿಗ್ಭಂದನವಾಗಿದೆ. ದೇವಸ್ಥಾನಕ್ಕೆ ನೀರು ನುಗ್ಗಿದ್ದು ಜಲಾವೃತವಾಗಿದೆ. ಇತಿಹಾಸ ಪ್ರಸಿದ್ದ ಬಪ್ಪನಾಡು ದೇವಸ್ಥಾನಕ್ಕೆ ಶಾಂಭವಿ ನದಿ ನೀರು ನುಗ್ಗಿದ್ದು,ದೇವಿಗೆ ಜಲ ದಿಗ್ಬಂಧನವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ ಭಾರಿ ಮಳೆಯಾಗುತ್ತಿದೆ.
ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ
ಮಲೆನಾಡು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ನದಿಗಳಲ್ಲಿ ಒಳಹರಿವು ಹೆಚ್ಚಾಗುತ್ತಿದೆ. ಜೋಗ ಜಲಪಾತ ಕೂಡ ಮೈದುಂಬಿಕೊಳ್ಳುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಕಡೆ ತೋಟ, ಹೊಲ, ಗದ್ದೆಗಳಿಗೆ ನೀರು ನುಗ್ಗಿದ್ದು ಜಲಾವೃತಗೊಂಡಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ಇನ್ನು ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಚದುರಿದಂತೆ ಅಲ್ಲಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೊಡಗು ಜಿಲ್ಲೆಯಲ್ಲಿ ಪುನರ್ವಸು ಮಳೆ ಅಬ್ಬರ ಹೆಚ್ಚಾಗಿದ್ದು, ಭಾಗಮಂಡಲ ಜಲಾವೃತವಾಗಿದೆ. ಕಾವೇರಿ ನದಿಯಲ್ಲಿ ಹರಿವು ಹಚ್ಚುತ್ತಿದ್ದು, ಕೃಷ್ಣರಾಜಸಾಗರಕ್ಕೆ ಒಳಹರಿವು ಹೆಚ್ಚಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಹಾಸನ, ರಾಮನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ. ಬೆಳಗಾವಿ, ಬಳ್ಳಾರಿ, ವಿಜಯನಗರ, ಬಿಜಾಪುರ, ಕಲಬುರಗಿ, ಗದಗ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications