Karnataka Rain: ಕರಾವಳಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ: ಉಳಿದ ಜಿಲ್ಲೆಗಳ ಮಳೆ ಮುನ್ಸೂಚನೆ ವರದಿ
ರಾಜ್ಯದಲ್ಲಿ ಮಳೆಯ ಕಣ್ಣಾ ಮುಚ್ಚಾಲೆ ಮುಂದುವರೆದಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ವರುಣ ಕೃಪೆ ತೋರಿದ್ದರೆ, ಉಳಿದ ಜಿಲ್ಲೆಗಳಲ್ಲಿ ಮಳೆ ಅನಿಶ್ಚಿತವಾಗಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ವಾರಾಂತ್ಯದಲ್ಲಿ ಕೂಡ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದ್ದು ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ 40-45 ಕಿಮೀ ನಿಂದ 55 ಕಿಮೀ ವರೆಗೆ ಹೆಚ್ಚಾಗುವ ಸಾಧ್ಯತೆ ಇದ್ದು, ಭಾರಿ ಅಲೆಗಳು ತೀರಕ್ಕೆ ಅಪ್ಪಳಿಸಲಿವೆ. ಸ್ಥಳೀಯರು, ಪ್ರವಾಸಿಗರು ಕೂಡ ಸಮುದ್ರದ ತೀರಕ್ಕೆ ಹೋಗಬಾರದು ಎಂದು ಜಿಲ್ಲಾಡಳಿತಗಳು ಎಚ್ಚರಿಕೆ ನೀಡಿವೆ.
ಸುಳ್ಯ, ಮಂಗಳೂರು, ಪಣಂಬೂರು, ಅಂಕೋಲಾ, ಮರವಂತೆ, ಮಾವಿನಕಾಡು, ಬೈಂದೂರು, ಮೂಡಿಗೆರೆ, ಉಡುಪಿ, ಮಲ್ಪೆ, ಮುರುಡೇಶ್ವರ, ನಾಪೊಕ್ಲು, ಲಿಂಗನಮಕ್ಕಿ, ಕೊಟ್ಟಿಗೆಹಾರ, ಕೊಪ್ಪ, ಶೃಂಗೇರಿ, ಆಗುಂಬೆ, ಧರ್ಮಸ್ಥಳ, ಉಜಿರೆ, ಕಳಸ, ಹೊನ್ನಾವರ, ಶಿರಸಿ, ಸಿದ್ದಪುರ, ಸಾಗರ, ಶಿವಮೊಗ್ಗ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
ಮಲೆನಾಡು ಭಾಗಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ತೀರ್ಥಹಳ್ಳಿ, ಶಿರಸಿ ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದರೆ, ಉತ್ತರ ಮತ್ತು ದಕ್ಷಿಣ ಒಳನಡಿನ ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರೆದಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಕೂಡ ಸಾಧಾರಣ ಮಳೆ ಮುಂದುವರೆಯಲಿದೆ. ಶುಕ್ರವಾರ ಸಂಜೆ ನಗರದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಶನಿವಾರ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ.












Click it and Unblock the Notifications