Karnataka Rain: ವಾರಂತ್ಯದಲ್ಲಿ ಈ 10 ಜಿಲ್ಲೆಗಳಲ್ಲಿ ಭಾರಿ ಮಳೆ
ರಾಜ್ಯದಲ್ಲಿ ಹಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಸದ್ಯ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಶನಿವಾರ ಮತ್ತು ಭಾನುವಾರ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳಲ್ಲಿ ಉದುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೇರ್ಕಾಡಿ ಎನ್ನುವಲ್ಲಿ 111.5 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲಿ ಅಧಿಕ ಮಳೆ ಬಿದ್ದ ಪ್ರದೇಶವಾಗಿದೆ.
ಇದನ್ನು ಹೊರತು ಪಡಿಸಿ ಕೆರಗಾಳು, ಹಾರಾಡಿ, ಉಪ್ಪೂರು, ಮಡಮಕ್ಕಿ, ಹೆಂಗವಳ್ಳಿಯಲ್ಲಿ ಉತ್ತಮ ಮಳೆಯಾಗಿದೆ.
ಬೀದರ್ ಜಿಲ್ಲೆಯ ನಿರಾಗುಡಿ, ಬೊಂತಿ, ನಾಗಮಾರಪಲ್ಲಿ, ಬಾಗ್ದಾಳ, ಚಿಮ್ಮೆಗಾವ್, ಚಿಂತಕಿ, ಸುಂದಲ್ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯ ಮಡೆ, ಹಾನಗಲ್ಲು, ಐಗೂರು, ಸೋಮವಾರಪೇಟೆ, ಬೆಂಗೂರು, ಉತ್ತರ ಕನ್ನಡ ಜಿಲ್ಲೆಯ ಕೊಡ್ಕಣಿ, ಅಗಸೂರು ಸೇರಿದಂತೆ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಿದೆ.
ಎಲ್ಲೆಲ್ಲಿ ಉತ್ತಮ ಮಳೆ?
ಬೆಳಗಾವಿ, ವಿಜಯಪುರ, ಉತ್ತರ ಕನ್ನಡ, ಶಿವಮೊಗ್ಗ, ಕಲಬುರಗಿ, ಬೀದರ್, ಯಾದಗಿರಿ, ಕೊಡಗು, ದಕ್ಷಿಣ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಚದುರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ.
ಬಾಗಲಕೋಟೆ, ಧಾರವಾಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸದುರಿದಂತೆ ಸಾಧಾರಣ ಮಳೆಯಾಗಲಿದೆ. ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗಲಿದೆ.
ಉಕ್ಕಿ ಹರಿಯುತ್ತಿರುವ ನದಿಗಳು
ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾದ ಕಾರಣ ನದಿಗಳು ಉಕ್ಕಿ ಹರಿಯುತ್ತಿವೆ. ಖಾಲಿಯಾಗಿ ಬಣಗುಡುತ್ತಿದ್ದ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಸದ್ಯ ಜಲಾಶಯದ ಮಟ್ಟ 110 ಅಡಿ ತಲುಪಿದ್ದು ಭರ್ತಿಯಾಗಲು ಇನ್ನು 14 ಅಡಿ ಬಾಕಿ ಇದೆ.
ಕಬಿನಿ, ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಆಲಮಟ್ಟಿ, ಘಟಪ್ರಭಾ ಜಲಾಶಯಕ್ಕೆ ಕೂಡ ಭಾರಿ ಒಳ ಹರಿವು ಇದೆ. ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ರಾಜ್ಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದೆ.












Click it and Unblock the Notifications