Karnataka Rains: ವಾಯುಭಾರ ಕುಸಿತ: ರಾಜ್ಯದಲ್ಲಿ 3 ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Karnataka Rains: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಜೊತೆಗೆ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನ ರಣಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಹಲವು ಭಾಗಗಳಲ್ಲಿ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 18) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಹಲವೆಡೆ ಮಳೆ ಮುಂದುವರೆದಿದೆ. ಕೆಲವೇ ಕ್ಷಣಗಳಲ್ಲಿ ನಾಗರದಾದ್ಯಂತ ಮಳೆರಾಯ ಆವರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕಳೆದ ಒಂದು ವಾರದಿಂದ ನಗರದಲ್ಲಿ ಜಿನುಗು ಮಳೆಯಾಗುತ್ತಿದೆ. ಅಲ್ಲದೆ, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಎಷ್ಟು ದಿನ ಮಳೆ?: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 21ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರಿಂದ 19ರಂದು ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 20ರವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಯಾವ ಜಿಲ್ಲೆಗಳಿಗೆ ಆರೆಂಜ್, ರೆಡ್ ಅಲರ್ಟ್?: ಇಂದು (ಆಗಸ್ಟ್ 18) ಭಾರೀ ಮಳೆ ಹಿನ್ನೆಲೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಡ್ ಘೋಷಣೆ ಮಾಡಲಾಗಿದೆ. ಇನ್ನು ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಮತ್ತೊಂದೆಡೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ಧಾರವಾಡ, ಕೊಪ್ಪಳ, ವಿಜಯನಗರ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ರಜೆ ಘೋಷಣೆ?: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳ ಹಲವೆಡೆ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಮಕ್ಕಳು, ಸಾರ್ವಜನಿಕರು ನದಿ ಹಾಗೂ ಹಳ್ಳಗಳ ಸಮೀಪ ಹೋಗದಂತೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಆಗಸ್ಟ್ 18) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೊಯಿಡಾ ಮತ್ತು ದಾಂಡೇಲಿ ಸೇರಿ 10 ತಾಲೂಕುಗಳಿಗೆ ಈ ರಜೆ ಅನ್ವಯ ಆಗಲಿದೆ. ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 18ರಿಂದ ಆಗಸ್ಟ್ 19ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಹಾಸನದಲ್ಲಿ ಎಲ್ಲೆಲ್ಲಿ ರಜೆ ಘೋಷಣೆ?: ಭಾರಿ ಮಳೆ ಮುಂದುವರೆದ ಹಿನ್ನೆಲೆ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲೂ ಶಾಲಾ-ಕಾಲೇಜುಗಳಿಗೆ ರಜೆ: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಮತ್ತು ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲೂ ರಜೆ: ಭಾರೀ ಮಳೆ ಮುಂದುವರೆದ ಹಿನ್ನೆಲೆ ಇಂದು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜೆಗಳನ್ನು ಸರಿದೂಗಿಸಲು ಆಗಸ್ಟ್ 23ರ ಶನಿವಾರ ಪೂರ್ತಿ ದಿನ ಶಾಲೆ ನಡೆಸಲು ಸೂಚಿಸಲಾಗಿದೆ.
ಈಗಾಗಲೇ ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಇಲ್ಲಿನ ನದಿ ಕರೆ, ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಈ ಹಿನ್ನೆಲೆ ನದಿ ಪ್ರದೇಶಗಳಿಗೂ ಹೋಗದಂತೆ ಜನರು, ಮಕ್ಕಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ












Click it and Unblock the Notifications