ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್ 28ರ ವರೆಗೂ ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ ಸಾಧ್ಯತೆ..
Karnataka Rains: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 23) ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನಿನ್ನೆ ಅಂದರೆ ಶುಕ್ರವಾರ ಸಂಜೆ ನಗರದ ಹಲವೆಡೆ ಮಳೆಯಾಗಿದೆ. ಇನ್ನು ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಆಗಸ್ಟ್ 23ರಂದು ರಾಜ್ಯದ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಬೆಂಗಳೂರಿನ ಹಲವೆಡೆ ಸುತ್ತಮುತ್ತಲಿನ ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 19°C ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಆಗಸ್ಟ್ 23, 24, 25, 26ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಆಗಸ್ಟ್ 27 ಹಾಗೂ 28ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.
ಭಾರೀ ಮಳೆಯಿಂದಾಗಿ ರಾಜ್ಯ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಅಲ್ಲದೆ, ಮತ್ತೊಂದೆಡೆ ಪ್ರಮುಖ ಜಲಾಶಯಗಳು ಸಹ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಇದರಿಂದ ನದಿ ತೀರದ ಪ್ರದೇಶಗಳ ಜನರಿಗೆ ನಡುಕ ಶುರುವಾಗಿದೆ. ಈಗಾಗಲೇ ಹಲವೆಡೆ ನದಿ ತೀರಗಳ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಜಿಲ್ಲಾಡಳಿತಗಳು ಸೂಚನೆ ನೀಡಿವೆ. ಅಲ್ಲದೆ, ಈಗಾಗಲೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ರಜೆಗಳನ್ನು ಸರಿದೂಗಿಸುವ ಕೆಲಸಗಳನ್ನು ಕೂಡ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದುಳಿಯಬಾರದೆನ್ನುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಂದು ಭಾರೀ ಮಳೆ ಮುಂದುವರೆದರೆ, ಪ್ರವಾಹ ಭೀತಿಯ ಭಾಗಗಳಲ್ಲಿ ಮತ್ತೆ ರಜೆ ಘೋಷಣೆ ಮಾಡುವ ಸಾಧ್ಯತೆಯಿರುತ್ತದೆ.












Click it and Unblock the Notifications