Karnataka Rains: ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 20ರ ವರೆಗೂ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಅಕ್ಟೋಬರ್ 20ರ ವರೆಗೂ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್ 16) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ನಗರದ ಹಲವೆಡೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಒಂದು ವಾರದಿಂದ ನಗರದ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ನಾಲ್ಕು ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ನೀಡಲಾಗಿದೆ.

ವಾಯಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳವರೆಗೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅಕ್ಟೋಬರ್ 18ರ ವರೆಗೆ ಮಳೆ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಇಂದು (ಅಕ್ಟೋಬರ್ 16) ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗೆ ಅಕ್ಟೋಬರ್ 20ರ ವರೆಗೂ ರಾಜ್ಯದಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಈಗಾಗಲೇ ಕಳೆದ ಒಂದು ವಾರದದಿಂದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಪರಿಣಾಮ ಕೆಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಪ್ರಮುಖ ಜಲಾಶಯಗಳು ಸಹ ಭರ್ತಿಯಾಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಮತ್ತೊಂದೆಡೆ, ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆಯಿಂದ ಅತೀವೃಷ್ಟಿ ಉಂಟಾಗಿ ಬೆಳೆಹಾನಿ ಆದ ಘಟನೆಗಳೂ ನಡೆದಿವೆ.
ಪ್ರತಿ ಬಾರಿಯಂತೆ ಈ ಬಾರಿಯೂ ಮುಂಗಾರು ಮಳೆ ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟಿದ್ದು, ಬಳಿಕ ವಾಡಿಕೆಯಂತೆ ಕರ್ನಾಟಕಕ್ಕೆ ಜೂನ್ ಆರಂಭದಲ್ಲೇ ಲಗ್ಗೆ ಇಟ್ಟಿತು. ಮುಂಗಾರು ಮಳಡ ಹೊಡೆತಕ್ಕೆ ಬಹುತೇಕ ಜಿಲ್ಲೆಗಳ ಜನರು ಪತರುಗುಟ್ಟಿ ಹೋಗಿದ್ದರು. ಇದೀಗ ಮುಂಗಾರು ಬಹುತೇಕ ಅಂತ್ಯವಾಗಿದೆ. ಈ ನಡುವೆಯೇ ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ.












Click it and Unblock the Notifications