Karnataka Rain Alert: ಮಳೆ.. ಮಳೆ.. ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಎಚ್ಚರಿಕೆ: ಹವಾಮಾನ ವರದಿ
Karnataka Rain Alert: ಇದೀಗ ರಾಜ್ಯದಲ್ಲಿ ಬಿರುಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 12) ಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣ ಆಗಿತ್ತು. ಆದರೆ 9 ಗಂಟೆ ಆಗುತ್ತಿದ್ದಂತೆ ರಣಬಿಸಿಲು ಮುಂದುವರೆದಿತ್ತು. ಸಂಜೆ ಬಳಿಕ ಮತ್ತೆ ನಗರದ ಹಲವೆಡೆ ತುಂತುರು ಮಳೆ ಮುಂದುವರೆದಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಜೋರು ಮಳೆ ಆದರೂ ಆಗಬಹುದು ಎನ್ನುವ ಮುನ್ಸೂಚನೆ ಇದೆ.

ಇಂದು ಎಲ್ಲೆಲ್ಲಿ ಮಳೆ?: ಈಗಾಗಲೇ ನಿನ್ನೆ ಅಂದರೆ ಶುಕ್ರವಾರ ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ. ಇಂದು ಕೂಡ ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಕೊಪ್ಪಳ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ದಿನ ಎಲ್ಲೆಲ್ಲಿ ಮಳೆ?: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆ ಬೀಳಲಿದೆ. ಅಲ್ಲದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ವೇಳೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಅಲ್ಲಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಈಗಾಗಲೇ ನಿನ್ನೆ ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 42.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾದ ಬಗ್ಗೆ ವರದಿಯಾಗಿದೆ. ಹಾಗೆಯೇ ಕಲಬುರಗಿ ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳ ಕೆಲವೆಡೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಐದು ದಿನಗಳ ಕಾಲ ತಾಪಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದೆ.
ಒಟ್ಟಿನಲ್ಲಿ ರಣಬಿಸಿಲಿನ ನಡುವೆಯೇ ಹಲವೆಡೆ ಮುಂಗಾರು ಪೂರ್ವ ಮಳೆ ಮುಂದುವರೆದಿದೆ. ಇನ್ನೂ ಕೆಲವೇ ತಿಂಗಳುಗಳಲ್ಲಿ ಮುಂಗಾರು ಎಂಟ್ರಿ ಕೊಡಲಿದೆ. ಆಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಮುನ್ಸೂಚನೆಯನ್ನೂ ಕೂಡ ನೀಡಿದೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲಿನಿಂದ ಬೇಸತ್ತಿರುವ ಜನ ಮಳೆ ಯಾವಾಗ ಬರಲಿದೆ ಎಂದು ಮೋಡದ ಕಡೆ ಮುಖ ಮಾಡಿದ್ದಾರೆ.












Click it and Unblock the Notifications