Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ಮುಂಗಾರು ಚುರುಕು ಪಡೆದಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂತರಗಳೇ ಸಂಭವಿಸಿವೆ. ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರು ಜೀವವನ್ನ ಕೈಯಲ್ಲಿಡಿದು ಜೀವನ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿಗೆ ಕಳೆದ ಎರಡು ದಿನಗಳಿಂದ ಮಳೆರಾಯ ಬಿಡುವು ನೀಡಿದ್ದಾನೆ. ಇನ್ನು ಇಂದು (ಆಗಸ್ಟ್ 22) ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅಲ್ಲದೆ, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ?: ಆಗಸ್ಟ್ 26ರ ವರೆಗೆ ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಇನ್ನು ಬೀದರ್, ಕಲಬುರಗಿ ಹಾಗೂ ಯಾದಗಿರಿಗಳಲ್ಲಿ ಮಳೆ ಜೊತೆಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಈಗಾಗಲೇ ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಹಲವು ಪ್ರಮುಖ ಜಲಾಶಯಗಳು ಕೂಡ ತುಂಬಿದ್ದು, ನದಿಪಾತ್ರದ ಜನರಿಗೆ ನಡುಕ ಶುರುವಾಗಿದೆ. ಯಾಕಂದ್ರೆ ಯಾವಾಗ ಬೇಕಾದರೂ ನೀರು ಬಿಡಬಹುದು. ಇದರಿಂದ ಪ್ರವಾಹದ ಆತಂಕ ನದಿಪಾತ್ರದ ಜನರಿಗೆ ಎದುರಾಗಿದೆ.
ಇನ್ನು ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಕಾದಿದೆಯೋ ಎನ್ನುವ ಆತಂಕ ಜನರಲ್ಲಿದೆ. ಒಂದೆಡೆ ಮುಂಗಾರು ಮಳೆಯಿಂದ ರೈತರ ಬೆಳೆಗಳಿಗೆ ಅನುಕೂಲವಾದ್ದು, ಮತ್ತೊಂದೆಡೆ ಜಲಪ್ರಳಯದ ಆತಂಕ ಎದುರಾಗಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ಹಲವೆಡೆ ಮನೆ-ಮಠಗಳನ್ನು ಕಳೆದುಕೊಂಡು ಜನರು ಬೀದಿಗೆ ಬಂದಿರುವ ಘಟನೆಗಳು ಸಂಭವಿಸಿರುವ ಉದಾಹರಣೆಗಳಿವೆ.












Click it and Unblock the Notifications