Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜುಲೈ 14) ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಭಾನುವಾರ ನಗರದ ಹಲವೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಮತ್ತೊಂದೆಡೆ ಇಂದಿನಿಂದ ಮುಂದಿನ ಹಲವು ದಿನಗಳವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅದರಲ್ಲೂ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ರಣಭೀಕರ ಮಳೆ ಸುರಿಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಅಲರ್ಟ್ ಅನ್ನು ಮುಂದಿನ ದಿನದ ಹವಾಮಾನ ನೋಡಿಕೊಂಡು ಮುಂದುವರೆಸುವ ಸಾಧ್ಯತೆಯಿದೆ.
ಎಲ್ಲೆಲ್ಲಿ ಮಳೆ?: ಅಲ್ಲದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ. ಇನ್ನು ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ತುಂಬಿ ಹರಿದಿದ್ದು, ಪರಿಣಾಮ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಈ ಬಾರಿ ರಾಜ್ಯಕ್ಕೆ ಅವಧಿಗೂ ಮುನ್ನ ಎಂಟ್ರಿ ಕೊಟ್ಟಿರುವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬೆರೆಯುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮುಂದುವರೆದ ಕಾರಣ ಈ ಭಾಗದ ಜನರು ಜೀವವನ್ನು ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ.
ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದರಿಂದ ಜನರು ಇನ್ನೇನು ಆಪತ್ತು ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ರಣಮಳೆ ಮುಂದುವರೆದಿದ್ದು, ಈ ಭಾಗದ ಜನರು ಅಕ್ಷರಸಃ ನಲುಗಿ ಹೋಗಿದ್ದಾರೆ.












Click it and Unblock the Notifications