Karnataka Rains: ರಾಜ್ಯದ ಈ ಜಿಲ್ಲೆಗಳಲ್ಲೇ 3 ದಿನ ರಣಭೀಕರ ಮಳೆ; ರೆಡ್, ಯೆಲ್ಲೋ ಆರೆಂಜ್ ಅಲರ್ಟ್
Karnataka Rains: ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಹಲವು ಭಾಗಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 29) ಬೆಳಗ್ಗೆಯೇ ಮೋಡ ಕವಿದ ವಾತಾವರಣ ಇದ್ದು, ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿದೆ. ಈಗಾಗಲೇ ಕಳೆದ ಒಂದು ವಾರದಿಂದ ನಗರದ ಹಲವೆಡೆ ಭಾರೀ ಮಳೆಯಾದ್ರೆ, ಕೆಲವೆಡೆ ಸಾಧಾರಣ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಮುಂದಿನ ಮೂರು 3 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 29, 30ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಆರೆಂಜ್ ಅಲರ್ಟ್, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಘೋಷಿಸಿದೆ.
ಮೇ 30ರಂದು ಉಡುಪಿ, ದಾವಣಗೆರೆ, ಮೈಸೂರು ಜಿಲ್ಲೆಗೆ ಆರೆಂಜ್, ತುಮಕೂರು, ಮಂಡ್ಯ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್‌ಗೆ ಯೆಲ್ಲೊಅಲರ್ಟ್ ನೀಡಿದೆ. ಮೇ 31ರಂದು ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಘೋಷಣೆ ಮಾಡಿದೆ. ಶಿವಮೊಗ್ಗ, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಘೋಷಿಸಿದೆ. ಈಗಾಗಲೇ ನಿನ್ನೆ (ಮೇ 28) ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ದೊಡ್ಡ ಅವಾಂತರಗಳೇ ಸಂಭವಿಸಿವೆ ಎಂದು ತಿಳಿದುಬಂದಿದೆ.
ಕಳೆದ ಎರಡು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಸಾಧಾರಣ ಮಳೆ ಮುಂದುವರೆದಿದೆ. ಆದರೂ ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಕವಿದ ವಾತಾವರಣವೇ ಮುಂದುವರೆಯುತ್ತಿದೆ. ಇಂದು ಸಹ ಇದೇ ರೀತಿಯ ವಾತಾವರಣ ಮುಂದುವರೆಯಲಿದ್ದು, ಹಲವೆಡೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಎಲ್ಲೆಲ್ಲಿ ಮಳೆಯಾಗಿದೆ?: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ಬೀದರ್, ಯಾದಗಿರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಮಳೆರಾಯನ ಆರ್ಭಟ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಎಚ್ಚರಿಕೆಯ ಸಂದೇಶವನ್ನು ಕೂಡ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನದ ವಿಚಾರಕ್ಕೆ ಬಂದರೆ ಬುಧವಾರ ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿರುವ ಬಗ್ಗೆ ವರದಿಯಾಗಿದೆ.












Click it and Unblock the Notifications