Karnataka Rains: ವಾರಾಂತ್ಯದಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ-ಆರೆಂಜ್ ಅಲರ್ಟ್ ಘೋಷಣೆ
Karnataka Rains: ಕೆಲವು ದಿನಗಳಿಂದ ಮುಂಗಾರು ಮಳೆ ಆರ್ಭಟ ರಾಜ್ಯದಲ್ಲಿ ತಗ್ಗಿದ್ದು, ಇದೀಗ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಈ ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 16 & 17ರಂದು ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ಆಗಸ್ಟ್ 16) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಶನಿವಾರ (ಆಗಸ್ಟ್ 17) ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹಗಲಿನ ವೆಳೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಭಾರೀ ಮಳೆ ಸುರಿಯಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಇನ್ನು ಇಂದು ಇನ್ನೂ ಕೆಲವೇ ಕ್ಷಣಗಳಲ್ಲು ತುಮಕೂರು, ಬೆಂಗಳೂರು, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಹಾಸನ, ಚಿಕ್ಕಮಗಳೂರಿನಾದ್ಯಂತ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ತಿಳಿಸಿದೆ. ಒಟ್ಟಿನಲ್ಲಿ ಮತ್ತೆ ಇದೀಗ ಕರ್ನಾಟಕ ದಕ್ಷಿಣ, ಉತ್ತರ ಒಳನಾಡಿನಲ್ಲಿ ಮಳೆರಾಯನ ಆರ್ಭಟ ಮತ್ತೆ ಚುರುಕು ಪಡೆಯಲಿದೆ ಎಂದು ತಿಳಿಸಿದೆ.
ಡ್ಯಾಂಗೆ ಹರಿದುಬರದ ನೀರು: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಜಲಾಶಯದ ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚು ಮಳೆ ಇಲ್ಲದ ಕಾರಣ ಡ್ಯಾಂಗೆ ನೀರು ಹರಿದು ಬರುತ್ತಿಲ್ಲ.
ವಾಣಿವಿಲಾಸ ಜಲಾಶಯದ ಪ್ರಸ್ತುತ ನೀರಿನ ಮಟ್ಟ 115.60 ಅಡಿ ತಲುಪಿದೆ. ಜಲಾಶಯ ಕೊಡಿ ಬೀಳಲು ಇನ್ನು 15 ಅಡಿ ನೀರು ಬರಬೇಕಿದೆ. ಪ್ರತಿದಿನ ಭದ್ರಾ ಜಲಾಶಯದಿಂದ ವಿವಿ ಸಾಗರ ಡ್ಯಾಂಗೆ 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಬಳಿ ಎರಡು ಗುಡ್ಡಗಳ ಮಧ್ಯೆ ನಿರ್ಮಿಸಿರುವ ಜಲಾಶಯವೇ ಮಾರಿಕಣಿವೆ ಡ್ಯಾಂ. ಇನ್ನೂ ವಾಣಿ ವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್ ಪೀಸ್ ಎಂದು ಗುರುತಿಸಲಾಗಿದೆ. 1906ರಲ್ಲಿ ಮೈಸೂರು ಒಡೆಯರ ಕಾಲದಲ್ಲಿ ಹಿರಿಯೂರು ತಾಲ್ಲೂಕಿನ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಅನುಕೂಲ ಆಗುವಂತೆ ವಾಣಿವಿಲಾಸಪುರ ಬಳಿ ವಾಣಿ ವಿಲಾಸ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ.












Click it and Unblock the Notifications