Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಜೂನ್ 29ರವರೆಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
Karnataka Rains: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡದಿದ್ದು, ಈಗಾಗಲೇ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಜೂನ್ 29ರವರೆಗೆ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಪ್ರವಾಹದಂತಹ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮಟ ಮಟ ಮಧ್ಯಾಹ್ನವೇ ಮಳೆರಾಯ ಆರ್ಭಟಿಸಿದ್ದಾನೆ. ಹಾಗೆಯೇ ಇಂದು ಸಹ ನಗರದಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಇನ್ನು ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆದಿದ್ದಾನೆ. ಹಾಗೆಯೇ ಭಾರೀ ಮಳೆಯಿಂದ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅನಾಹುತಗಳೇ ಸೃಷ್ಟಿಯಾದರೆ, ಮತ್ತೊಂದೆಡೆ ಕಳೆದ ಒಂದು ವರ್ಷದಿಂದ ಮಳೆಯಿಲ್ಲದೆ ಕಂಗೆಟ್ಟಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
ಇನ್ನು ಜೂನ್ 21ರಿಂದ ಅಂದರೆ ಇಂದಿನಿಂದ ಜೂನ್ 29ರವರೆಗೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿತಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಚಿಕ್ಕಮಗಳೂರು, ದಾವಣಗೆರೆ, ಬಾಗಲಕೋಟೆ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಬಿರುಸು ಮಳೆಯಾಗಲಿದೆ ಎಂದು ತಿಳಿಸಿದೆ.
ಅದರಲ್ಲೂ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 23ರವರೆಗೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಗದಗ, ಕೊಪ್ಪಳದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications