Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಇದೀಗ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಚುರುಕು ಪಡೆದಿದೆ. ಮುಂದಿನ 5 ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಹಲವೆಡೆ ಮುಂದಿನ ಐದು ದಿನ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಬಿಸಿಲಿನ ವಾತಾವರಣ ಕಂಡುಬಂದರೂ, ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದದೆ.

ರಾಜಧಾನಿ ಬೆಂಗಳೂರಿನ ಹವಾಮಾನ
ಅಕ್ಟೋಬರ್ 17 ರಿಂದ 22 ರವರೆಗೆ ದಕ್ಷಿಣ ಒಳನಾಡಿನ ಬಹಯತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಅದರಲ್ಲೂ ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯು ತಾಪಮಾನಕ್ಕೆ ಬ್ರೇಕ್ ನೀಡಿದ್ದು, ತಂಪಾದ ವಾತಾವರಣ ಮುಂದುವರೆದಿದೆ.
ಈಗಾಗಲೇ ಅಕ್ಟೋಬರ್ 16ರಂದು ನಗರದ ಹಲವೆಡೆ ಉತ್ತಮ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆದ್ದರಿಂದ ರಸ್ತೆಗಳಲ್ಲಿ ಸಂಚಾರ ಮಾಡುವ ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುನ್ನೆಚ್ಚರಿಕಾ ಕ್ರಮವಾಗಿ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ದಕ್ಷಿಣ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?
ಇನ್ನುಳಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರಗಳಲ್ಲಿಯೂ ಅಕ್ಟೋಬರ್ 22ರ ವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅಕ್ಟೋಬರ್ 17ರಿಂದ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಅಕ್ಟೋಬರ್ 17, 18 ಮತ್ತು 19ರಂದು ಹಲವು ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗಬಹುದು. ಸಮುದ್ರ ತೀರ ಮತ್ತು ಕರಾವಳಿ ಭಾಗದಲ್ಲಿ ಗುಡುಗು, ಮಿಂಚಿನ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ರಾಯಚೂರು, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರ ವರೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಈ ಭಾಗಗಳಲ್ಲಿ ಮಳೆಯ ಪ್ರಮಾಣವು ಸ್ಥಳದಿಂದ ಸ್ಥಳಕ್ಕೆ ವ್ಯತ್ಯಾಸ ಆಗಲಿದ್ದು, ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಹಾಗೂ ಪ್ರಯಾಣಿಕರು ಹವಾಮಾನ ಇಲಾಖೆ ಮುನ್ಸೂಚನೆಯನ್ನು ಗಮನಿಸುವುದು ಸೂಕ್ತ ಎಂದು ಹೇಳಲಾಗುತ್ತಿದೆ.
ಮುನ್ನೆಚ್ಚರಿಕಾ ಕ್ರಮಗಳು
* ಮಳೆ ಮತ್ತು ಸಿಡಿಲು ಬರುವ ಸಂದರ್ಭದಲ್ಲಿ ದೊಡ್ಡ ಮರಗಳ ಕೆಳಗೆ ನಿಲ್ಲುವುದು ಅಥವಾ ವಿದ್ಯುತ್ ಕಂಬ, ಟ್ರಾನ್ಸ್‌ಫಾರ್ಮರ್‌ಗಳ ಬಳಿ ಆಶ್ರಯ ಪಡೆಯುವುದನ್ನು ಸಂಪೂರ್ಣವಾಗಿ ತಪ್ಪಿಸಿ.
* ಅಕ್ಟೋಬರ್ 22ರ ವರೆಗೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಇರಲಿದ್ದು, ಸಾರ್ವಜನಿಕರು ಸೂಕ್ತ ಜಾಗರೂಕತೆ ವಹಿಸಬೇಕಾಗಿದೆ ಎಂದು ಸಲಹೆ ನೀಡಿದೆ.
* ಕರಾವಳಿ ತೀರಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶವನ್ನು ನೀಡಿದೆ.


Click it and Unblock the Notifications
