Karnataka Rains: ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ: ಅಪಾಯದಿಂದ ಪಾರಾಗಲು ಪ್ರಮುಖ ಸಲಹೆಗಳು
Karnataka Rains: ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂಂಗಾರು ಪೂರ್ವ ಮಳೆ ಆರ್ಭಟಿಸುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಎಂಟ್ರಿ ಕೊಡಲಿದೆ. ಆದ್ದರಿಂದ ಈಗಲೇ ಮುಂಜಾಗ್ರತಾ ಕ್ರಮವಾಗಿ ಗುಡುಡು, ಸಿಡಿಲಿನ ಅಪಾಯದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ನಿಯಂತ್ರಣ ಮಾಡಲು ಕೆಲವು ಸಲಹೆ, ಸೂಚನೆಗಳನ್ನು ನೀಡಿದೆ.

ಸಾಮಾನ್ಯವಾಗಿ ಗುಡುಗು, ಸಿಡಿಲು ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಮಧ್ಯಾಹ್ನ ಅಥವಾ ಸಂಜೆ ಸಮಯದಲ್ಲಿ ಸಿಡಿಲು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಗುಡುಗು ಸಿಡಿಲಿನಿಂದ ಆಗುವ ಅಪಾಯಗಳನ್ನು ನಿಯಂತ್ರಣ ಮಾಡಲು ಕ್ರಮಗಳನ್ನು ಕೈಗೊಳ್ಳುವಂತೆ ಕೆಲವು ಸಲಹೆಗಳನ್ನು ನೀಡಲಾಗಿದೆ.
ಕೈಗೊಳ್ಳಬೇಕಾದ ಕ್ರಮಗಳು
* ಹೆಚ್ಚಾಗಿ ಸಿಡಿಲು ಬಡಿಯುವ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ, ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು.
* ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ Indian Meteorological Department ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocolನ ಮೂಲಕ ಪ್ರಸಾರ ಮಾಡುವುದು ಹಾಗೂ ಈ ಕುರಿತು ಅರಿವು ಮೂಡಿಸಬೇಕು.
* ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕವೂ ಸಹ ಮಾಹಿತಿ ನೀಡುವುದು ಹಾಗೂ ಜಾಗೃತಿ ಮೂಡಿಸುವುದು.
* ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡುವುದು.
* ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಮಾಹಿತಿ ಶಿಕ್ಷಣ ಸಂವಹನ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.
* ಕೃಷಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳು/ನೌಕರರು, ರೈತ ಸಂಪರ್ಕ ಕೇಂದ್ರಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ/ನೌಕರರು ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು/ನೌಕರರು ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೃಷಿಕರಿಗೆ, ಕುರಿ, ಮೇಕೆ ಹಾಗೂ ಇತರೆ ಜಾನುವಾರುಗಳ ಸಾಕಾಣಿಕೆದಾರರಿಗೆ ಸೂಕ್ತ ಅರಿವು ಮೂಡಿಸುವುದು.
ಪಾಲಿಸಬೇಕಾದ ಸಲಹೆ ಸೂಚನೆಗಳು
* ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol ಮೂಲಕ ಬರುವ ಸಂದೇಶಗಳನ್ನು ಮೊಬೈಲ್‌ನಲ್ಲಿ ಗಮನಿಸುವುದು.
* ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.
* ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.
* ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.
* ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು.
* ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.
* ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು.
* ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು.
* ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು.
* ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಇವು ಸಿಡಿಲನ್ನು ಆಕರ್ಷಿಸುತ್ತವೆ.
* ಅರಣ್ಯ ಪ್ರದೇಶದಲ್ಲಿ ಇದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.
* ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರ ಇರಬೇಕು.
* ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬಾರದು.
* ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
* ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರ ಇರಬೇಕು.
* ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು.
ಕಳೆದ ಬಾರಿ ಮುಂಗಾರು ಸಮಯದಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಈ ಬಾರಿ ಕೂಡ ಮುಂಗಾರು ಆರ್ಭಟ ಜೋರಾಗಿರಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಪಾಯದಿಂದ ಪಾರಾಗಲು ಈ ಸಲಹೆಗಳನ್ನು ನೀಡಲಾಗಿದೆ.












Click it and Unblock the Notifications