ನಟ ವಿಷ್ಣುವರ್ಧನ್, ಬಿ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ: ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು, ಸೆಪ್ಟೆಂಬರ್ 11: ನಟ, ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲುರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಇಂದು(ಗುರುವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಮಾಡಲಾಗಿದೆ. ದಿವಂಗತ ನಟ ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಬಹು ದಿನಗಳ ಅಭಿಮಾನಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದಂತೆ ಆಗಿದೆ.
ನಟ ವಿಷ್ಣುವರ್ಧನ್ ಜೊತೆಗೆ ನಟಿ ಬಿ ಸರೋಜ ದೇವಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ರಾಷ್ಟ್ರ ಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಸಂಪುಟ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ ಮಾಡಿದೆ. ಅಂದಹಾಗೇ ಕೆಲ ದಿನಗಳ ಹಿಂದೆಯಷ್ಟೇ ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸ್ಯಾಂಡಲ್ ವುಡ್ ಹಿರಿಯ ನಟಿಯರು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದರು.

ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯವರು ಮನವಿ ಮಾಡಿದ್ರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ನಟ ವಿಷ್ಣುವರ್ಧನ್, ನಟಿ ಬಿ ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರೆ.
ಇನ್ನೂ ಈ ಹಿಂದೆ ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಈ ಹಿಂದೆಯೂ ಹಲವು ಕಲಾವಿದರು ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂಬ ಬೇಡಿಕೆಯೂ ಕೇಳಿ ಬಂದಿತ್ತು. ಕಳೆದ ಒಂದು ವಾರದ ಹಿಂದೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಇದೀಗ ಅಭಿಮಾನಗಳ ಬಹುದಿನದ ಕನಸಿನಂತೆ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿಯನ್ನ ರಾಜ್ಯ ಸರ್ಕಾರ ಘೋಷಿಸಿದೆ.
ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಅವರು ಸುದ್ದಿಗೋಷ್ಟಿಯ ಮೂಲಕ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ಯಾವಾಗ, ಎಲ್ಲಿ ಪ್ರಶಸ್ತಿ ಪ್ರದಾನ ಮಾಡಬೇಕೆಂದು ಮುಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಲಿದೆ.
ರಾಜ್ಯ ಸರ್ಕಾರ ವಿಷ್ಣುವರ್ಧನ್ ಕರ್ನಾಟಕ ರತ್ನ ನೀಡಿರುವ ಬಗ್ಗೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಮಾತನಾಡಿ, ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಅಪ್ಪಾಜಿಗೆ ಕರ್ನಾಟಕ ರತ್ನ ಘೋಷಿಸಿದ್ದಕ್ಕೆ ಖುಷಿ ಆಯಿತು. ಅಪ್ಪಾಜಿಯವರು ಈ ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಹರು. ಅವರು ಯಾವಾಗಲೂ ನಮ್ಮೊಂದಿಗೆ ಇರುತ್ತಾರೆ. ಕನ್ನಡ ಚಿತ್ರರಂಗದ ಎಲ್ಲ ಕಲಾವಿದರಿಗೆ ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.












Click it and Unblock the Notifications