ಮಲೆನಾಡಿಗರೇ ಆತಂಕ ಬೇಡ! ಪಶ್ಚಿಮ ಘಟ್ಟ ESA ಕರಡು ವಿರುದ್ಧ ಕರ್ನಾಟಕದ ಖಡಕ್ ನಿರ್ಧಾರ
ಬೆಂಗಳೂರು; ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇದೀಗ ಮತ್ತೊಮ್ಮೆ ಪರಿಸರ ಸೂಕ್ಷ್ಮ ಪ್ರದೇಶ (ESA) ವೆಂದು ಗುರುತಿಸಿ ಕರಡು ಅಧಿಸೂಚನೆ ಹೊರಡಿಸಿದ್ದನ್ನು ಕರ್ನಾಟಕ ಸರ್ಕಾರ ಖಂಡಿಸಿದೆ. ಅಲ್ಲದೇ ವರದಿ ತಿರಸ್ಕರಿಸಲು ನಿರ್ಧರಿಸಿದ್ದು, ವರದಿ ಜಾರಿಗೆ ಬಿಡುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನ ಕೈಗೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಅವರು ಮಲೆನಾಡಿನ ಜನರಿಗೆ ತಿಳಿಸಿದ್ದಾರೆ.

ಕೇಂದ್ರ ಅಧಿಸೂಚನೆ ಒಪ್ಪಿಲ್ಲ
ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿತ್ತು. ಹೀಗಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ, ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಅಧಿಕೃತ ಮಾಹಿತಿ ನೀಡಿದ್ದಾರೆ.
ಅಧಿಸೂಚನೆಯಲ್ಲಿ ಏನಿದೆ?
ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು 'ಪರಿಸರ ಸೂಕ್ಷ್ಮ ಪ್ರದೇಶ' ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ 'ಪರಿಸರ ಸೂಕ್ಷ್ಮ ಪ್ರದೇಶ' ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ.
ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಭೀಮಣ್ಣ ಟಿ. ನಾಯಕ್, ಟಿ.ಡಿ. ರಾಜೇಗೌಡ, ಎಚ್. ಡಿ. ತಮ್ಮಯ್ಯ ಹಾಗೂ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.
ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು ಎಂದು ತಿಳಿಸಿದರು.


Click it and Unblock the Notifications
