Breaking; ಕರ್ನಾಟಕದಲ್ಲಿ ಶೇ 10ರ ಗಡಿ ದಾಟಿದ ಪಾಸಿಟಿವಿಟಿ ದರ
ಬೆಂಗಳೂರು, ಜನವರಿ 11; ಕರ್ನಾಟಕದಲ್ಲಿ 14,473 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರಾಜ್ಯದ ಪಾಸಿಟಿವಿಟಿ ದರ ಶೇ 10ರ ಗಡಿ ದಾಟಿದೆ.
ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ 1,40,452 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. 14,473 ಹೊಸ ಪ್ರಕರಣ ದಾಖಲಾಗಿದ್ದು, ರಾಜ್ಯದ ಪಾಸಿಟಿವಿಟಿ ದರ ಶೇ 10.30ಗೆ ಏರಿಕೆಯಾಗಿದೆ.
Test positivity rate in Karnataka cross 10% as cases rise to 14.5k:
— Dr Sudhakar K (@mla_sudhakar) January 11, 2022
◾New cases in State: 14,473
◾New cases in B'lore: 10,800
◾Positivity rate in State: 10.30%
◾Discharges: 1,356
◾Active cases State: 73,260 (B'lore- 59k)
◾Deaths:05 (B'lore- 3)
◾Tests: 1,40,452#COVID19
24 ಗಂಟೆಯಲ್ಲಿ ರಾಜ್ಯದಲ್ಲಿ 1,356 ಜನರು ಡಿಸ್ಚಾರ್ಜ್ ಆಗಿದ್ದಾರೆ. 5 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 73,260 ಆಗಿದೆ.

ಬೆಂಗಳೂರು ನಗರದಲ್ಲಿನ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 10,800 ಆಗಿದೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿಯೇ 3 ಜನರು ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿಗಳ ಸಭೆ; ಕೋವಿಡ್ ಸೋಂಕು ತಗುಲಿ ಹೋಂ ಕ್ವಾರಂಟೈನ್‌ನಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ರಾಜ್ಯದಲ್ಲಿ ಈಗಾಗಲೇ ನೈಟ್, ವಾರಾಂತ್ಯ ಕರ್ಫ್ಯೂ ಸೇರಿದಂತೆ ವಿವಿಧ ಕಠಿಣ ನಿಯಮಗಳು ಜಾರಿಯಲ್ಲಿವೆ.
ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚಿಸಲಾಯಿತು.
ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ಕೊಡಲಾಯಿತು.
ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚನೆ ಕೊಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
3ನೇ ಅಲೆಯಲ್ಲಿ ಹೋಂ ಐಸೋಲೇಷನ್‌ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿ ಕಿಟ್ ಒದಗಿಸುವಂತೆ ಸೂಚನೆ ನೀಡಲಾಗಿದೆ. ಪರೀಕ್ಷೆ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ?, ಇಲ್ಲವೇ? ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಹೋಂ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು. ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚನೆ ಕೊಡಲಾಗಿದೆ. ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಆದ್ಯತೆಯ ಮೇರೆಗೆ ನೀಡಲು ತೀರ್ಮಾನ ಮಾಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ಮತ್ತು ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಹೆಚ್ಚು ಜನಸಂದಣಿ ಸೇರುವ ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಮತ್ತು ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.












Click it and Unblock the Notifications