ಮೀಸಲಾತಿ ಶೇ.56 ಹೆಚ್ಚಳ ರದ್ದುಪಡಿಸಿದ ಹೈಕೋರ್ಟ್: ನಡೆದ ನೇಮಕಾತಿಗಳ ಕಥೆಯೇನು? ಪರಮೇಶ್ವರ್ ರಿಯಾಕ್ಟ್

ಬೆಂಗಳೂರು: ರಾಜ್ಯ ಸರ್ಕಾರವು ಈ ಹಿಂದೆ ಮೀಸಲಾತಿಯನ್ನು ಶೇ.50 ರಿಂದ ಶೇ.56ಕ್ಕೆ ಹೆಚ್ಚಿಸಲಾಗಿತ್ತು. ಅದರಂತೆಯೇ ಸರ್ಕಾರ ನೇಮಕಾತಿಗಳನ್ನೂ ಮಾಡಿಕೊಂಡಿದೆ. ಇದೀಗ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಇದೀಗ ಮೀಸಲಾತಿ ಹೆಚ್ಚಿಸಿ ಆದೇಶಿಸಿದ ಬಳಿಕ ನಡೆದ ನೇಮಕಾತಿ, ಭರ್ತಿಗಳು ಕಥೆ ಏನು? ಎಂಬ ಆತಂಕ ಒಂದೆಡೆ ಶುರುವಾಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಅಥವಾ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೋ ಎಂಬ ಎರಡು ದಾರಿ ರಾಜ್ಯ ಸರ್ಕಾರದ ಮುಂದಿದೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರವು ಮೀಸಲಾತಿಯ ಶೇ.50ರ ಮಿತಿಯನ್ನು ಮೀರಿ, ಒಟ್ಟು ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸುವ ತೀರ್ಮಾನ ಕೈಗೊಂಡಿತ್ತು. ಪರಿಶಿಷ್ಟ ಜಾತಿಯ ಮೀಸಲಾತಿಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು.

Karnataka Reservation

ಈ ಮೀಸಲಾತಿಗೆ ಸಂಬಂಧಿಸಿದಂತೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರ ತೀರ್ಪು ಪ್ರಕಟವಾಗಿದ್ದು, ಮೀಸಲಾತಿ ಹೆಚ್ಚಳದ ತೀರ್ಮಾನವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ಮೆಟ್ಟಿಲೇರುತ್ತಾ ಸರ್ಕಾರ?

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಲಾಗುವುದು. ಬಳಿಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ತಿಳಿಸಿದ್ದಾರೆ.

ಸರ್ಕಾರದ ಮನವಿ ತಿರಸ್ಕೃತ

ಹಿಂದಿನ ಸರ್ಕಾರವು ಮೀಸಲಾತಿ ಹೆಚ್ಚಿಸಿ ಆದೇಶ ಹೊರಡಿಸಿ ಕ್ರಮಗಳನ್ನು ಕೈಗೊಂಡಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ಅನೇಕ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ ಪ್ರಮಾಣವನ್ನು ಅನುಸರಿಸಿದೆ. ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ವಿವಿಧ ವ್ಯಕ್ತಿಗಳು ನ್ಯಾಯಾಲಯದ ಮೊರೆ ಹೋದ ಸಂದರ್ಭದಲ್ಲಿ ರಾಜ್ಯ ಸರ್ಕಾರವೂ ತನ್ನ ನಿಲುವನ್ನು ಮಂಡಿಸಿ, ಮೀಸಲಾತಿ ಹೆಚ್ಚಳವನ್ನು ಎತ್ತಿಹಿಡಿಯುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್ ಅದನ್ನು ತಿರಸ್ಕರಿಸಿದೆ.

ನೇಮಕಾತಿ ಮೇಲೆ ಪರಿಣಾಮ ಆಗುತ್ತಾ? ಆತಂಕವೇನು?

ಶೇ.56ರಷ್ಟು ಮೀಸಲಾತಿಯ ಆಧಾರದಲ್ಲಿ ಈಗಾಗಲೇ ನಡೆದಿರುವ ಶೈಕ್ಷಣಿಕ ಪ್ರವೇಶಾತಿ ಹಾಗೂ ಸರ್ಕಾರಿ ನೇಮಕಾತಿಗಳ ಮೇಲೆ ಹೈಕೋರ್ಟ್ ತೀರ್ಪು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಪರಿಶೀಲಿಸಬೇಕಿದೆ.

ಈಗಾಗಲೇ ನಡೆದಿರುವ ನೇಮಕಾತಿಗಳ ಪರಿಸ್ಥಿತಿ ಏನಾಗುತ್ತದೆ? ನ್ಯಾಯಾಲಯದ ಆದೇಶವು ಹಿಂದಿನ ದಿನಾಂಕದಿಂದ ಅನ್ವಯವಾಗುತ್ತದೆಯೇ ಅಥವಾ ಮುಂದಿನ ಪ್ರಕ್ರಿಯೆಗಳಿಗೆ ಮಾತ್ರ ಅನ್ವಯವಾಗುತ್ತದೆಯೇ? ಇಂತಹ ಎಲ್ಲ ಕಾನೂನಾತ್ಮಕ ಪ್ರಶ್ನೆಗಳು ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳನ್ನು ಸಮಗ್ರವಾಗಿ ಚರ್ಚಿಸಬೇಕಿದೆ ಎಂದು ಡಿಸಿಎಂ ತಿಳಿಸಿದರು.

ಈ ಕುರಿತು ಅಡ್ವೊಕೇಟ್ ಜನರಲ್ ಹಾಗೂ ಕಾನೂನು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾನೂನಿನ ಪ್ರಕಾರ ಯಾವ ಕ್ರಮಗಳು ಸಾಧ್ಯ ಎಂಬುದನ್ನು ಪರಿಶೀಲಿಸಿದ ನಂತರವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಬೇಕಾದ ಪರಿಸ್ಥಿತಿ ಎದುರಾದರೆ ಒಳಮೀಸಲಾತಿ ಪ್ರಮಾಣಗಳನ್ನೂ ಅನುಪಾತದ ಆಧಾರದಲ್ಲಿ ಪರಿಷ್ಕರಿಸುವ ಸಾಧ್ಯತೆ ಇದೆ. ಗಣಿತದ ದೃಷ್ಟಿಯಿಂದ ಅಂತಹ ಪರಿಷ್ಕರಣೆ ಮಾಡುವುದು ಕಷ್ಟದ ವಿಚಾರವಲ್ಲ. ಆದರೆ ಇದರಿಂದ ವಿವಿಧ ಸಮುದಾಯಗಳಿಗೆ ದೊರೆಯಬೇಕಾದ ಅವಕಾಶಗಳು ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚು ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದರು.

ಹೈಕೋರ್ಟ್ ತೀರ್ಪಿನಿಂದ ಉದ್ಯೋಗಾಕಾಂಕ್ಷಿಗಳು ಹಾಗೂ ಮುಂದಿನ ನೇಮಕಾತಿ ಪ್ರಕ್ರಿಯೆಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನೂ ಪರಿಶೀಲಿಸಬೇಕಿದೆ. ಸಂವಿಧಾನದ ಚೌಕಟ್ಟಿನೊಳಗೆ ಕಾನೂನಾತ್ಮಕವಾಗಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಚರ್ಚಿಸಲಿದೆ ಎಂದು ಹೇಳಿದರು.

ವಿಶೇಷ ಪ್ರಕರಣವೆಂದು ಪರಿಗಣಿಸಬಹುದಿತ್ತು!

ಮೀಸಲಾತಿ ಹೆಚ್ಚಳ ತಿರಸ್ಕರಿಸಿರುವ ಹೈಕೋರ್ಟ್ ತೀರ್ಪಿನ ಬಗ್ಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ ಅವರು, ಕರ್ನಾಟಕದ ಪರಿಸ್ಥಿತಿಯನ್ನು ಅಸಾಧಾರಣ ಸಂದರ್ಭವೆಂದು ಪರಿಗಣಿಸಿ ವಿಶೇಷ ಪ್ರಕರಣವಾಗಿ ಪರಿಶೀಲಿಸುವ ಅವಕಾಶವಿತ್ತು ಎಂದು ಅವರು ಹೇಳಿದರು.

ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿಗೆ ಸಂವಿಧಾನ ತಿದ್ದುಪಡಿಯ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆ ರಾಜ್ಯಕ್ಕೆ ಅಂತಹ ಅವಕಾಶ ದೊರೆತಿರುವಾಗ, ಕರ್ನಾಟಕದಲ್ಲಿ ಶೇ.50ರ ಮಿತಿಗಿಂತ ಹೆಚ್ಚುವರಿಯಾಗಿ ಶೇ.6ರಷ್ಟು ಮೀಸಲಾತಿ ಕಲ್ಪಿಸಿರುವುದನ್ನೂ ಅದರ ಸಾಮಾಜಿಕ ಹಿನ್ನೆಲೆಯ ಆಧಾರದಲ್ಲಿ ವಿಶೇಷ ಪ್ರಕರಣವಾಗಿ ಪರಿಗಣಿಸಬಹುದಿತ್ತು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಮೀಸಲಾತಿ ಹೆಚ್ಚಳದ ಹಿಂದಿರುವ ಸಾಮಾಜಿಕ ಉದ್ದೇಶ ಹಾಗೂ ಅವಕಾಶವಂಚಿತ ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ನ್ಯಾಯಾಲಯವು ಅಸಾಧಾರಣ ಸಂದರ್ಭದ ಆಧಾರದಲ್ಲಿ ತೀರ್ಮಾನ ಕೈಗೊಳ್ಳಬಹುದಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳವನ್ನು ತಿರಸ್ಕರಿಸಿರುವುದು ಸಮಂಜಸವಲ್ಲ ಎಂದು ಹೇಳಿದರು.

ಸಂಪುಟದಲ್ಲಿ ಸಾಧಕ-ಬಾಧಕ ಚರ್ಚೆ, ನಂತರ ನಿರ್ಧಾರ

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಸಂವಿಧಾನದ ಚೌಕಟ್ಟಿನಲ್ಲಿ ಬೇರೆ ಯಾವ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟವು ಎಲ್ಲ ಸಾಧಕ-ಬಾಧಕಗಳನ್ನು ಪರಿಗಣಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಪುನರುಚ್ಚರಿಸಿದರು.

ನ್ಯಾಯಾಲಯದ ತೀರ್ಪಿನ ಮೇಲೆ ಸರ್ಕಾರ ಪ್ರಭಾವ ಬೀರುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿಗರ ಆರೋಪಗಳಿಗೆ ಅವರು ಉತ್ತರಿಸಿದರು. ನ್ಯಾಯಾಧೀಶರು ಕಾನೂನಿನ ಪ್ರಕಾರ ತಮ್ಮ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ಸರ್ಕಾರವು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಿ ನಿರ್ದಿಷ್ಟ ತೀರ್ಪು ನೀಡುವಂತೆ ಹೇಳಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಪನ್ನು ಕಾನೂನಿನ ಚೌಕಟ್ಟಿನಲ್ಲಿ ಮೇಲ್ಮಟ್ಟದ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿದೆ. ಆ ಅವಕಾಶವನ್ನು ಬಳಸಿಕೊಳ್ಳುವ ಕುರಿತು ಸಚಿವ ಸಂಪುಟ ತೀರ್ಮಾನಿಸಲಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+