Government Job: ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಭರ್ಜರಿ ಗುಡ್‌ನ್ಯೂಸ್
ಬೆಂಗಳೂರು, ಅಕ್ಟೋಬರ್ 06: ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡಲು ಮತ್ತು ಕ್ರೀಡಾಪಟುಗಳ ಭವಿಷ್ಯಕ್ಕೆ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕ್ರೀಡೆಯಲ್ಲಿ ಮಹತ್ತರ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ನೀಡಲು ಅಧಿಕೃತ ಆದೇಶ ಹೊರಡಿಸಿದೆ.
'ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2026'ರ ಅಡಿಯಲ್ಲಿ ಸರ್ಕಾರಿ ನಾಗರಿಕ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಈ ಸೌಲಭ್ಯವು ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪ್ರತಿಯೊಂದು ಪ್ರವರ್ಗಕ್ಕೂ ಅನ್ವಯವಾಗಲಿದೆ.

ಪೊಲೀಸ್, ಅರಣ್ಯ ಇಲಾಖೆಯಲ್ಲಿ ಶಕಡ 3ರಷ್ಟು ಮೀಸಲಾತಿ
ಇದರ ಜೊತೆಗೆ ಅರಣ್ಯ ಮತ್ತು ಪೊಲೀಸ್ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ 3ರಷ್ಟು ಮೀಸಲಾತಿ ನೀಡಲು ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಒಲಿಂಪಿಕ್ ಸಂಸ್ಥೆ ಕಳೆದ ನಾಲ್ಕು ವರ್ಷಗಳಿಂದ ನಡೆಸಿದ ಪ್ರಯತ್ನದ ಫಲವಾಗಿ ಈ ಆದೇಶ ಹೊರಬಿದ್ದಿದೆ ಎಂದು ತಿಳಿಸಲಾಗಿದೆ.
ಅರ್ಹತಾ ಮಾನದಂಡಗಳು
* ಅಭ್ಯರ್ಥಿಗಳು ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ಕಾಲ ವಾಸವಿದ್ದ ನಿವಾಸಿಗಳಾಗಿರಬೇಕು.
* ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಈ ಮೀಸಲಾತಿಯ ಪ್ರಯೋಜನ ಪಡೆಯಲಿದ್ದಾರೆ.
* ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಸೇರಿದಂತೆ ಅಧಿಸೂಚಿತ 34 ಪ್ರಮುಖ ಕ್ರೀಡೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಿದವರಿಗೆ ನಿಯಮಾನುಸಾರ ಕೃಪಾಂಕದ ಸೌಲಭ್ಯವೂ ಲಭಿಸಲಿದೆ.
ಸುದೀರ್ಘ ಹೋರಾಟಕ್ಕೆ ಸಿಕ್ಕ ಪ್ರತಿಫಲ
ಕರ್ನಾಟಕ ಒಲಿಂಪಿಕ್ ಸಂಸ್ಥೆಯು ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಅರ್ಹ ಪ್ರಾತಿನಿಧ್ಯ ಮತ್ತು ಭದ್ರತೆ ಸಿಗಬೇಕೆಂದು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಸುತ್ತಿದ್ದ ಪ್ರಯತ್ನಗಳ ಫಲವಾಗಿ ಈ ಮಹತ್ವದ ಆದೇಶ ಹೊರಬಿದ್ದಿದೆ. ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ,
ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?
'ಕ್ರೀಡಾಪಟುಗಳು ದೇಶ ಮತ್ತು ರಾಜ್ಯಕ್ಕೆ ಹೆಮ್ಮೆ ತರುತ್ತಾರೆ. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಕ್ರೀಡೆಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವ ಯುವಜನತೆಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ,' ಎಂದು ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ. ಸರ್ಕಾರದ ಈ ಮಹತ್ವದ ನಿರ್ಧಾರವನ್ನು ರಾಜ್ಯದ ಕ್ರೀಡಾಪಟುಗಳು, ತರಬೇತುದಾರರು ಹಾಗೂ ಕ್ರೀಡಾಭಿಮಾನಿಗಳು ಸಂತದಿಂದ ಸ್ವಾಗತಿಸಿದ್ದಾರೆ ಎನ್ನಲಾಗಿದೆ.


Click it and Unblock the Notifications
