Karnataka Weather: ಈ ಜಿಲ್ಲೆಗಳಲ್ಲಿ ದಿಢೀರ್ ಹೆಚ್ಚಾಗಲಿದೆ ಬಿಸಿಲು, ಕಾರಣ ಇಲ್ಲಿದೆ
ರಾಜ್ಯದಲ್ಲಿ ಚಳಿಗಾಲದ ಅವಧಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದೆ. ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಿಂದ ಬಿಸಿಲಿನ ಪ್ರಮಾಣದಲ್ಲಿ ನಿರಂತರ ಏರಿಕೆ ಕಾಣುತ್ತಿದೆ. ಶೀತಗಾಳಿ ಕೂಡ ಬೀಸುತ್ತಿರುವ ಕಾರಣ ಚಳಿಯ ಪ್ರಮಾಣ ತಗ್ಗಿ ಅಕ್ಷರಶಃ ಬೇಸಿಗೆ ಶುರುವಾದಂತಿದೆ. ಆದರೆ, ಈ ತಿಂಗಳವರೆಗೆ ಸಾಮಾನ್ಯವಾಗಿ ಚಳಿ ಮುಂದುವರಿಯುತ್ತದೆ.
ರಾಜ್ಯದಾದ್ಯಂತ ಕೆಳ ಉಷ್ಣವಲಯದ ಮಟ್ಟದಲ್ಲಿ ಹಗುರದಿಂದ ಮಧ್ಯಮ ಪೂರ್ವ ಅಥವಾ ಪೂರ್ವ ಹವಾಮಾನವಿರುತ್ತದೆ. ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡುಬರಲಿದೆ. ಫೆಬ್ರವರಿ 16ರವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ 2 ಅಥವಾ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ದೊಡ್ಡ ಬದಲಾವಣೆಯಾಗಿಲ್ಲ. ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ಹೆಚ್ಚು ಬದಲಾವಣೆ ಇಲ್ಲ. ಬೆಂಗಳೂರು ನಗರ ಮತ್ತು ನೆರೆಹೊರೆಯ ಸ್ಥಳೀಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಮುಖ್ಯವಾಗಿ ಮೋಡವಿಲ್ಲದ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಈ ವಾರದೊಳಗೆ ಗರಿಷ್ಠ ತಾಪಮಾನ ಸಾಮಾನ್ಯಮಟ್ಟಕ್ಕಿಂತ ಹೆಚ್ಚಳವಾಗುವ ಸಾಧ್ಯತೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲೂ ಬಿಸಿಲು ಹೆಚ್ಚಾಗಿದೆ.

ದಾವಣಗೆರೆಯಲ್ಲಿ 14 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಬೆಂಗಳೂರಿನ ಎಚ್ಎಎಲ್ನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ವರದಿಯಾಗಿದೆ. ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದಲ್ಲಿ ಈ ಸಲ ಮಳೆ ಮತ್ತು ಚಳಿಗಾಲ ಸಾಮಾನ್ಯ ಅವಧಿಗಿಂತ ಹೆಚ್ಚಾಗಿದ್ದು. ಅದೇ ರೀತಿ ಈ ಬಾರಿ ಬೇಸಿಗೆಯೂ ಹೆಚ್ಚಾಗಿರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕಾರಣದಿಂದ ಅವಧಿಗೂ ಮುನ್ನವೇ ಫೆಬ್ರವರಿಯಲ್ಲಿ ಹಗಲಿನ ವೇಳೆ ಬಿಸಿಲು ಹೆಚ್ಚಾಗಿ ಕಂಡುಬರುತ್ತಿದೆ. ಬೆಂಗಳೂರು ನಗರ ಭಾಗದಲ್ಲಿ ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಪಮಾನವು ದಾಖಲೆಯ ಮಟ್ಟವನ್ನು ತಲುಪಲಿದೆ ಎಂದು ಹೇಳಲಾಗುತ್ತಿದೆ.

ಹವಾಮಾನ ಇಲಾಖೆಯ ತಜ್ಞರಾದ ಸಿಎಸ್ ಪಾಟೀಲ್ ಅವರು ಹೇಳುವಂತೆ ಈ ಬಾರಿ ಬೆಂಗಳೂರಿನಲ್ಲಿ ಬೇಸಿಗೆಯಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಲಿದೆ ಎಂದು ಹೇಳಿದ್ದಾರೆ. ಅದೇ ರೀತಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ತಾಪಮಾನ 36ರಿಂದ 39 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ. ಹಾಗಾಗಿ ಬೆಂಗಳೂರಿನಲ್ಲಿ ಬಿಸಿಲು ತುಂಬಾ ವಿಪರೀತವಾಗಲಿದೆ. ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಲೇ ಇರುತ್ತದೆ ಎಂದು ಹೇಳಲಾಗಿದೆ.












Click it and Unblock the Notifications